ನಿಯಮ ಉಲ್ಲಂಘಿಸಿ ರೋಡ್ ಶೋ ನಡೆಸಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು

Published on

ಬೆಂಗಳೂರು: ವ್ಯಕ್ತಿಗತ ಅಂತರ ಕಾಯ್ದುಕೊಳ್ಳದೇ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ನಡೆಸಿದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿವೆ.

ಯಶವಂತಪುರ ಪೊಲೀಸ್ ಠಾಣೆಗೆ ಬಿಜೆಪಿ ಕಾರ್ಯಕರ್ತ ಜೆ.ಎಸ್.ಗಿರೀಶ್ ವಿರುದ್ಧ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಜಾಲಹಳ್ಳಿ ಪೊಲೀಸ್ ಠಾಣೆಗೆ ಬಿಬಿಎಂಪಿ ಅಧಿಕಾರಿಗಳು ದೂರು ಕೊಟ್ಟಿದ್ದಾರೆ.

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ರೋಡ್ ಶೋ ನಡೆಸಲು ಕಾಂಗ್ರೆಸ್ ಕಾರ್ಯಕರ್ತರು ಅನುಮತಿ ಕೋರಿದ್ದರು. ನೀತಿ ಸಂಹಿತೆ ಉಲ್ಲಂಸದಂತೆ ಹಾಗೂ ಕರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ 50 ಜನ ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸುವಂತೆ ಸೂಚಿಸಿ ಅನುಮತಿ ನೀಡಲಾಗಿತ್ತು. ಆದರೆ, ಎಂ.ಇ.ಎಸ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಜನರನ್ನು ಸೇರಿಸಿ ರೋಡ್ ಶೋ ನಡೆಸಿದ್ದಾರೆ. ನಿಯಮ ಉಲ್ಲಂಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆರೋಪಿಸಿ ಬಿಬಿಎಂಪಿ ಅಧಿಕಾರಿ ಶರದ್ ದರ್ಶನ್ ಎಂಬುವರು ಜಾಲಹಳ್ಳಿ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

ಯಶವಂತಪುರ ರೈಲು ನಿಲ್ದಾಣದ ಬಳಿ 500ಕ್ಕೂ ಹೆಚ್ಚು ಜನರನ್ನು ಸೇರಿಸಿ ರೋಡ್ ಶೋ ನಡೆಸಿರುವ ಬಿಜೆಪಿ ಕಾರ್ಯಕರ್ತ ಜೆ.ಎಸ್.ಗಿರೀಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ವಸಂತ್ ಕುಮಾರ್ ಎಂಬುವರು ಯಶವಂತಪುರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ. ಈ ಪ್ರಕರಣಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net