

ಕುಶಾಲನಗರ: ನದಿ, ಪ್ರಕೃತಿ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ತೋರುವ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕಾಗಿದೆ ಎಂದು ಶ್ರೀ ಚೌಡೇಶ್ವರಿ ದೇವಾಲಯ ಸಮಿತಿ ಕಾರ್ಯದರ್ಶಿ ಡಿ.ವಿ.ರಾಜೇಶ್ ಸಲಹೆ ನೀಡಿದರು.
ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಚೌಡೇಶ್ವರಿ ದೇವಾಲಯ ಆಡಳಿತ ಮಂಡಳಿ ಸಹಯೋಗದೊಂದಿಗೆ ಇತ್ತೀಚೆಗೆ ಏರ್ಪಡಿಸಿದ್ದ 136ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನದಿ ಪರಿಸರದ ಬಗ್ಗೆ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನಜಾಗೃತಿ ಮೂಡಿಸುವ ಬಳಗದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಅರ್ಚಕ ಕೃಷ್ಣಮೂರ್ತಿ ಭಟ್ ಅವರು ಅಷ್ಟೋತ್ತರ, ಅರ್ಚನೆ ನಂತರ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಲಾಯಿತು. ಚೌಡೇಶ್ವರಿ ಮಹಿಳಾ ಮಂಡಳಿ ಅಧ್ಯಕ್ಷ ಸುಲೋಚನಾ ಅವರ ನೇತೃತ್ವದಲ್ಲಿ ಮಹಿಳೆಯರು ನದಿಗೆ ಬಾಗಿನ ಅರ್ಪಿಸಿ, ಪ್ರಾರ್ಥನೆ ಸಲ್ಲಿಸಿದರು.
ದೇವಾಲಯ ಸಮಿತಿಯ ಅಧ್ಯಕ್ಷ ಡಿ.ಟಿ ವಿಜಯೇಂದ್ರ, ಡಿ.ಆರ್.ಸೋಮಶೇಖರ್, ಬಳಗದ ಪ್ರಮುಖರಾದ ಮಂಡೆಪಂಡ ಬೋಸ್ ಮೊಣ್ಣಪ್ಪ, ಚೈತನ್ಯ ಚಂದ್ರಮೋಹನ್, ಪದ್ಮಾ ಪುರುಷೋತ್ತಮ್ ಮತ್ತಿತರರಿದ್ದರು.