ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಶಯ ಬೆಂಗಳೂರು: ಪೋಲಿಯೊ ಮುಕ್ತ ಕರ್ನಾಟಕ ಮಾಡಬೇಕೆಂಬ ಅಪೇಕ್ಷೆಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಶಯ ವ್ಯಕ್ತಪಡಿಸಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಗುವಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಮೂಲಕ ರಾಷ್ಟ್ರೀಯ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ದೇಶಾದ್ಯಂತ ನಡೆಯುವ ಈ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ ಎಂದರು. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಮತ್ತೊಮ್ಮೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಬೇಕು. ಒಟ್ಟು 54 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿಯಿದೆ ಎಂದು ತಿಳಿಸಿದರು. ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಯಾವುದೇ ಲೋಪ ದೋಷಕ್ಕೆ ಅವಕಾಶವಿಲ್ಲದಂತೆ ನಿರ್ವಹಿಸಬೇಕು. ಜನರು ಈ ಅಭಿಯಾನದ ಯಶಸ್ಸಿಗೆ ಸಹಕರಿಸಬೇಕು ಎಂದು ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದರು.