

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರ ಮೇಲಿನ ಗುಂಡಿನ ದಾಳಿ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.
ನಗರದ ಗನ್ ಹೌಸ್ ಬಳಿ ಜಮಾವಣೆಗೊಂಡ ವಿದ್ಯಾರ್ಥಿಗಳು, ಉಗ್ರರ ವಿರುದ್ಧ ನಾನಾ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬುದು ಸಾರ್ವಕಾಲಿಕ ಸತ್ಯ. ಅಲ್ಲಿನ ಪ್ರತ್ಯೇಕವಾದದ ಮನಸ್ಥಿತಿಯನ್ನು ಬದಲಾಯಿಸಲು ಹಾಗೂ ಜನ- ಜೀವನ ಸ್ಥಿತಿಗತಿಯನ್ನು ಸ್ಥಿರಗೊಳಿಸಿ ಶಾಂತಿಯುತ ಕಾಶ್ಮೀರ ಎಂಬುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಕ್ರಮ ತೆಗೆದುಕೊಂಡಿದೆ ಎಂದರು.
ಇದೆಲ್ಲರ ಮಧ್ಯೆಯು ಭಯೋತ್ಪಾದನೆ ಮತ್ತು ನುಸುಳುಕೋರರ ಹಾವಳಿ ತಡೆಯಲು ಸಾಧ್ಯವಾಗಿಲ್ಲ. ಇತ್ತೀಚೆಗೆ ವಲಸೆ ಕಾರ್ಮಿಕರ ಮೇಲಿನ ದಾಳಿಗಳು ಹೆಚ್ಚಾಗಿದೆ. ಪ್ರವಾಸಿಗರ ಮೇಲಿನ ದಾಳಿ ಗಮನಿಸುವುದಾದರೆ ಕಾಶ್ಮೀರದಲ್ಲಿ ಶಾಂತಿ ನೆಲೆಸುವುದಕ್ಕೆ ಮತ್ತು ಭಾರತದೊಂದಿಗಿನ ಏಕತೆಗೆ ಉಗ್ರರು ಸವಾಲುವೊಡ್ಡುತ್ತಿದ್ದಾರೆ ಎಂದು ಆರೋಪಿಸಿದರು.
ಆದ್ದರಿಂದ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೆಗೊಳ್ಳಬೇಕು. ಭಾರತೀಯ ನಾಗರಿಕರೆಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು. ಇಸ್ಲಾಮಿಕ್ ಭಯೋತ್ಪಾದನೆ ವಿರುದ್ಧ ಧ್ವನಿ ಎತ್ತಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉಗ್ರಗಾಮಿಗಳ ದಾಳಿಗೆ ಒಳಗಾಗಿರುವ ಕುಟುಂಬಗಳಿಗೆ ಸಾಂತ್ವನ ಹೇಳಬೇಕು ಎಂದು ಒತ್ತಾಯಿಸಿದರು.