

ಹುಣಸೂರು : ನಗರದ ಎಪಿಎಂಸಿ ಸಮೀಪದ ಅರಸು ಪ್ರತಿಮೆ ವೃತ್ತದ ಬಳಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಬಸ್‌ಗಳ ನಿಲುಗಡೆ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಎಸ್‌ಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ತಾಲೂಕು ಕಚೇರಿ ಮುಂಭಾಗ ಬುಧವಾರ ಸಂಘಟನೆ ಸದಸ್ಯರೊಂದಿಗೆ ಪ್ರತಿಭಟನೆ ನಡೆಸಿ ಮಾತನಾಡಿದ ತಾಲೂಕು ಅಧ್ಯಕ್ಷ ಜೀವನ್, ಅರಸು ಪ್ರತಿಮೆ ಬಳಿ ಸರ್ಕಾರಿ ಪ್ರಥಮ ದರ್ಜೆಕಾಲೇಜು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕಾಲೇಜು, ಖಾಸಗಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ 4 ಸಾವಿರಕ್ಕು ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಹುತೇಕ ವಿದ್ಯಾರ್ಥಿಗಳು ಗ್ರಾಮೀಣ ಭಾಗದವರಾಗಿದ್ದಾರೆ. ನಗರ ಬಸ್ ನಿಲ್ದಾಣದಿಂದ ಒಂದೂವರೆ ಕಿ.ಮೀ.ದೂರದಲ್ಲಿ ಈ ಎಲ್ಲ ಶಿಕ್ಷಣ ಸಂಸ್ಥೆಗಳಿದ್ದು ಮಳೆಗಾಲ, ಬೇಸಿಗೆ ಸಂದರ್ಭದಲ್ಲಿ ಕಾಲೇಜಿಗೆ ಹೋಗಿಬರಲು ಅನನುಕೂಲವಾಗಿದೆ. ಅರಸು ಪ್ರತಿಮೆ ಬಳಿ ಬಸ್ ಗಳ ನಿಲುಗಡೆ ವ್ಯವಸ್ಥೆ ಕಲ್ಪಿಸಿದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಹಲವು ಬಾರಿ ಈ ಕುರಿತು ತಾಲೂಕು ಆಡಳಿತ ಮತ್ತು ಸಂಬಂಧಪಟ್ಟ ಸಾರಿಗೆ ನಿಗಮಕ್ಕೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ತಾಲೂಕು ಆಡಳಿತ ಈ ಕೂಡಲೇ ಕ್ರಮವಹಿಸಬೇಕೆಂದು ಆಗ್ರಹಿಸಿದರು.
ಗ್ರೇಡ್ 2 ತಹಸೀಲ್ದಾರ್ ನರಸಿಂಹಯ್ಯರಿ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.ಪ್ರತಿಭಟನೆಯಲ್ಲಿ ಕಾರ್ಯದರ್ಶಿ ಪ್ರಿಯಾ, ವಿಜಯಕುಮಾರ್, ಎಸ್.ಚಿರಾಗ್, ರಜಿಯಾ ಯಾಸ್ಮಿನ್ ಇತರರು ಭಾಗವಹಿಸಿದ್ದರು.