

ಕಡೂರು: ಮಕ್ಕಳ ಪ್ರತಿಭೆ ಅನಾವರಣಗೊಳಿಸಿ ಉತ್ತೇಜಿಸುವ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ಗೀತಗಾಯನ ಸ್ಪರ್ಧೆ ಆಯೋಜಿಸಲಾಗಿದೆ. ತಾಲೂಕು ಮಟ್ಟದಲ್ಲಿ ಆಯ್ಕೆಯಾದ ಮಕ್ಕಳು ಜಿಲ್ಲಾ ಮಟ್ಟದಲ್ಲಿಯೂ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಸ್ಕೌಟ್ಸ್ ಮತ್ತು ಗೈಡ್ಸ್‌ನ ತಾಲೂಕು ಅಧ್ಯಕ್ಷ ಶರತ್‌ಕೃಷ್ಣಮೂರ್ತಿ ತಿಳಿಸಿದರು.
ಪಟ್ಟಣದ ಅಂಬೇಡ್ಕರ್ ಕ್ರೀಡಾಂಗಣದ ಯೋಗಾಮಂದಿರದಲ್ಲಿ ಶನಿವಾರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕೆಎಂಕೆ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಗೀತಗಾಯನ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳಿಗೆ ದೇಶಾಭಿಮಾನ ಮೂಡಿಸುವ ಜತೆಗೆ ಸ್ಪರ್ಧಾ ಮನೋಭಾವ ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯವನ್ನು ರೂಪಿಸಲಾಗಿದೆ. ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿಯೂ ಹಂತ ಹಂತವಾಗಿ ಭಾಗವಹಿಸಬಹುದಾಗಿದೆ. 28 ಶಾಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದು 43 ತಂಡಗಳಿಂದ ದೇಶಭಕ್ತಿಗೀತೆ, ಜಾನಪದ ಗೀತೆಯ ಸ್ಪರ್ಧಾ ಕಾರ್ಯಕ್ರಮ ನಡೆಸಲಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಬಿಇಒ ಆರ್. ಸಿದ್ದರಾಜುನಾಯ್ಕ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕಿನ ಎಲ್ಲಾ ಶಾಲೆಗಳಲ್ಲಿ ಕಡ್ಡಾಯಗೊಳಿಸಲು ಹಾಗೂ ಮಕ್ಕಳು ಈ ಸಂಸ್ಥೆಯಲ್ಲಿ ತೊಡಗಿಸಿಕೊಳ್ಳಲು ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದರು.
ನೌಕರರ ಸಂಘದ ತಾಲೂಕು ಅಧ್ಯಕ್ಷ ಅರೇಹಳ್ಳಿ ಮಲ್ಲಿಕಾರ್ಜುನ್ ಮತನಾಡಿ, ಇಡೀ ದೇಶದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಬುದ್ದಮಾನಕ್ಕೆ ಬಂದಿದ್ದು ಲಕ್ಷಾಂತರ ವಿದ್ಯಾರ್ಥಿಗಳು ಈ ಸಂಸ್ಥೆಯಲ್ಲಿ ಗುರುತಿಸಿಕೊಂಡಿದ್ದಾರೆ. ಮಕ್ಕಳಲ್ಲಿ ಶಿಸ್ತು, ಸಂಯಮ ಮೂಡಲಿದೆ ಹಾಗೂ ಆರೋಗ್ಯವಂತ ವಿದ್ಯಾರ್ಥಿಗಳಾಗಿ ಹೊರಹೊಮ್ಮಲು ಸಾಧ್ಯವಾಗಲಿದೆ ಎಂದರು.
ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಕಾರ್ಯದರ್ಶಿ ನೀಲಕಂಠಚಾರ್, ಪ್ರಾಚಾರ್ಯ ತವರಾಜ್, ಅಜ್ಜಯ್ಯ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭೈರೇಗೌಡ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರುಶೇಖರ್, ಲಿಂಗರಾಜು, ಮುರುಳಿ, ಎಂ.ಎಚ್. ಪ್ರಕಾಶ್‌ಮೂರ್ತಿ, ಕೆ.ಡಿ.ನಾಗರಾಜ್, ಹರೀಶ್, ಆನಂದಪ್ಪ, ಶರತ್‌ಕುಮಾರ್, ಶಪೀತಾಬೇಗಂ, ಕಂಸಾಗರ ತ್ಯಾಗರಾಜ್ ಮತ್ತಿತರಿದ್ದರು.