ಮದ್ದೂರು ಬಂದ್‌ಗೆ ವರ್ತಕರ ಬೆಂಬಲ

19M.D.R.2
Published on

ಮದ್ದೂರು: ಕಬ್ಬಿಗೆ ಬೆಲೆ ನಿಗದಿಗೆ ಒತ್ತಾಯಿಸಿ ಮಂಡ್ಯದಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಬೆಂಬಲ ವ್ಯಕ್ತಿಪಡಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಸೋಮವಾರ ಕರೆ ನೀಡಿದ್ದ ಮದ್ದೂರು ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.


ಬಂದ್ ಹಿನ್ನೆಲೆಯಲ್ಲಿ ವರ್ತಕರು ಬೆಳಗ್ಗೆಯಿಂದಲೇ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಿ ಬಂದ್‌ಗೆ ಬೆಂಬಲ ವ್ಯಕ್ತಡಿಸಿದರು. ಈ ಹಿನ್ನೆಲೆಯಲ್ಲಿ ಪಟ್ಟಣದ ಪೇಟೆಬೀದಿಯಲ್ಲಿ ಜನಸಂಚಾರ ವಿರಳವಾಗಿತ್ತು. ಶಾಲಾ-ಕಾಲೇಜು, ಸರ್ಕಾರಿ ಕಚೇರಿ, ಆಸ್ಪತ್ರೆಗಳು ಹಾಗೂ ಹಾಲಿನ ಅಂಗಡಿಗಳು ಎದಿನಂತೆ ಕಾರ್ಯನಿರ್ವಹಿಸಿದವು.


ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಪೇಟೆಬೀದಿ, ಶಿವಪುರದಲ್ಲಿ ಬೈಕ್ ಜಾಥಾ ನಡೆಸಿದರು. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸೇರಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದಿದ್ದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕೊಪ್ಪ ಸರ್ಕಲ್‌ನಲ್ಲಿ ಬೈಕ್‌ಗಳನ್ನು ನಿಲ್ಲಿಸಿ ಮಾನವ ಸರಪಳಿ ರಚಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ಪ್ರತಿಭಟನೆ: ನಂತರ ತಾಲೂಕು ಕಚೇರಿಗೆ ಆಗಮಿಸಿದ ಕೆಲಕಾಲ ಪ್ರತಿಭಟನೆ ನಡೆಸಿದರು. ಕಬ್ಬಿಗೆ ಬೆಲೆ ನಿಗದಿ ಮಾಡಬೇಕು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಕರವೇ ತಾಲೂಕು ಅಧ್ಯಕ್ಷ ಎಸ್.ಅಶೋಕ್ ಮಾತನಾಡಿ, ಜಾಗತೀಕರಣ, ಉದಾರೀಕರಣ, ಖಾಸಗೀಕರಣ ನಡುವೆ ರೈತ ಕೃಷಿ ನಂಬಿ ಬದುಕಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಗಳು ರೈತಪರವಾಗಿ ನಿಲವು ತೆಗೆದುಕೊಳ್ಳದ ಕಾರಣ ಕೃಷಿ ನಷ್ಟದ ಬಾಬ್ತಾಗಿದೆ. ಮಂಡ್ಯದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತ ಸಂಘ ಹಲವು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಸರಿಯಲ್ಲ. ಕೂಡಲೇ ಮುಖ್ಯಮಂತ್ರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.


ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್ ಅವರಿಗೆ ಮನವಿ ಸಲ್ಲಿಸಿದರು. ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮಾರ್ಗದರ್ಶಕರಾದ ನ.ಲಿ. ಕೃಷ್ಣ, ಸಂಚಾಲಕ ಶ್ರೀಕ ಶ್ರೀನಿವಾಸ್, ತೆಂಗು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಚಂಸಂದ್ರ ಲಕ್ಷ್ಮಣ್, ಕರವೇ ತಾಲೂಕು ಅಧ್ಯಕ್ಷ ಅಶೋಕ್, ಮುಖಂಡರಾದ ತಿಪ್ಪೂರು ಮನು, ಹಾಗಲಹಳ್ಳಿ ಬಸವರಾಜ್, ಗೊರವನಹಳ್ಳಿ ಪ್ರಸನ್ನ, ಕೆ.ಟಿ. ಶಿವಕುಮಾರ್, ಜಿ.ಕೆ.ರಾಜು, ಕೊಣಸಾಲೆ ಉಮೇಶ್, ಶಶಿಕುಮಾರ್, ಅವಿನಾಶ್, ಮಹದೇವು, ಜಗದೀಶ್, ಚಾಮನಹಳ್ಳಿಸಾಗರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net