

ಬೀದರ್: ತಾಲ್ಲೂಕಿನ ಮನ್ನಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದೂರು ಸಲ್ಲಿಸಿದರೂ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ವೀರಶೆಟ್ಟಿ ಗೌಸಪುರೆ ಆರೋಪಿಸಿದ್ದಾರೆ.
ಈ ಕುರಿತು ಅವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. .ದೂರು ಕೊಟ್ಟು 15 ದಿನಗಳಾದರೂ ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸಿಲ್ಲ. ಬದಲಾಗಿ, ಅವ್ಯವಹಾರದಲ್ಲಿ ಭಾಗಿಯಾದವರ ಬೆಂಬಲಕ್ಕೆ ನಿಲ್ಲುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.
ಪಂಚಾಯಿತಿಯಲ್ಲಿ 2022-23 ಹಾಗೂ 2023-24 ನೇ ಸಾಲಿನ 15ನೇ ಹಣಕಾಸು ನಿಧಿ ಹಾಗೂ ಉದ್ಯೋಗ ಖಾತ್ರಿ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಅಧ್ಯಕ್ಷ, ಪಿಡಿಒ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳು, ನರೇಗಾ ಯೋಜನೆ ತಾಂತ್ರಿಕ ಸಂಯೋಜಕ ಹಾಗೂ ಕಂಪ್ಯೂಟರ್ ಆಪರೇಟರ್ ಅವ್ಯವಹಾರದಲ್ಲಿ ಶಾಮೀಲಾಗಿದ್ದಾರೆ ಎಂದು ದೂರಿದ್ದಾರೆ.
ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಗ್ರಾಮ ಪಂಚಾಯಿತಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.