ಮಳೆಗೆ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತೆ ಕೈಗೊಳ್ಳಿ

11
Published on

ಅವಧಿಗೂ ಮುನ್ನ ಜಿಲ್ಲಾದ್ಯಂತ ಮುಂಗಾರು ಮಳೆಯಾಗುತ್ತಿದ್ದು, ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿ ಮಾತನಡಿದರು. ಮಳೆಯಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗುವುದಿಲ್ಲ. ಆದರೆ ಮಳೆಯಿಂದ ಹಾನಿ ಉಂಟಾದರೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ಸೂಚಿಸಿದರು.

ಜಲಾಶಯಗಳ ನೀರಿನ ಮಟ್ಟ ಹಾಗೂ ಒಳಹರಿವು ಬಗ್ಗೆ ಮಾಹಿತಿ ಪಡೆದ ಅವರು, ಮಳೆಯಿಂದಾಗಿ ನಂಜನಗೂಡು ತಾಲೂಕಿನಲ್ಲಿ ಆರು ಪ್ರಾಣಿಗಳು ಹಾನಿಗೊಳಗಾಗಿದ್ದು, ಕೂಡಲೇ ಸೂಕ್ತ ಪರಿಹಾರ ದೊರಕಿಸಕೊಡಬೇಕು. 146 ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಶೀಘ್ರವಾಗಿ ಸರಿಪಡಿಸಬೇಕು ಎಂದರು.

ಅಧಿಕ ಮಳೆಯಾದ ಸಂದರ್ಭದಲ್ಲಿ ನೀರಿನ ಟ್ಯಾಂಕ್ ಹಾಗೂ ಕೊಳವೆ ಬಾವಿಗಳಿಗೆ ಮಳೆ ನೀರು ಹರಿಯುವುದನ್ನು ತಡೆಗಟ್ಟಲು ಕ್ರಮವಹಿಸಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರು ಕಲುಷಿತವಾಗಬಾರದು ಎಂದು ನಿರ್ದೇಶನ ನೀಡಿದರು.

ನಿರೀಕ್ಷೆಗಿಂತ ಹೆಚ್ಚು ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರುತ್ತಿವೆ. ಈ ಸಂದರ್ಭದಲ್ಲಿ ಬಿತ್ತನೆ ಸಿದ್ಧತೆಯಲ್ಲಿರುವ ರೈತರಿಗೆ ಯಾವುದೇ ಸಮಸ್ಯೆ ಉಂಟಾಗಬಾರದು. ಅಗತ್ಯವಿರುವಷ್ಟು ಬಿತ್ತನೆಬೀಜ ಹಾಗೂ ರಸಗೊಬ್ಬರವನ್ನು ಸಮರ್ಪಕವಾಗಿ ವಿತರಿಸಬೇಕು ಎಂದು ಸೂಚನೆ ನೀಡಿದರು.

ಪೊಟಾಸಿಯಂ ಬಳಕೆ ಹೆಚ್ಚಾದಷ್ಟು ಮಣ್ಣಿನ ಫಲವತ್ತತೆಯು ಕಡಿಮೆಯಾಗುತ್ತದೆ. ಇದನ್ನು ಕಡಿಮೆ ಉಪಯೋಗಿಸುವಂತೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ವಾಜಮಂಗಲ, ಸಿಂಧೂವಳ್ಳಿ ಹಾಗೂ ಹುಲ್ಲಹಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದಂತಹ ಅಹಿತರ ಘಟನೆಗಳು ಸಂಭವಿಸಬಾರದು. ಈ ಸಂಬಂಧ ಪೊಲೀಸ್ ಇಲಾಖೆಯು ಕಟ್ಟೆಚ್ಚರ ವಹಿಸಬೇಕು. ಬಾಬಾಸಾಹೇಬರು ಅವರಂತಹ ಮಹನೀಯರನ್ನು ಪ್ರತಿಯೊಬ್ಬರೂ ಗೌರವದಿಂದ ಕಾಣುವಂತೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಯಾರಿಂದಲೂ ಕಾನೂನು ಸುವ್ಯವಸ್ಥೆ ಹಾಳಾಗದಂತೆ ಕ್ರಮವಹಿಸಬೇಕು. ಹೋರಾಟ, ಪ್ರತಿಭಟನೆಗಳು ಕಾನೂನಿನ ಪ್ರಕಾರ ಶಾಂತಿಯುತವಾಗಿ ನಡೆಯಬೇಕು. ಅನಗತ್ಯವಾಗಿ ಕಾನೂನು ಉಲ್ಲಂಘಿಸುವ ಘಟನೆಗಳು ಜರುಗಬಾರದು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಅಲ್ಪಪ್ರಮಾಣದಲ್ಲಿ ಕೋವಿಡ್-19 ಪ್ರಕರಣಗಳ ದಾಖಲಾಗುತ್ತಿವೆ. ಅಗತ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಬೇಕು. ಕೋವಿಡ್ ಲಕ್ಷಣಗಳ ಕಂಡುಬಂದ ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು.

ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಕಚೇರಿಯಲ್ಲಿ ಕೂರಬಾರದು. ಸಮಸ್ಯೆ ಕಾಣಿಸಿಕೊಂಡ ಸ್ಥಳಕ್ಕೆ ಭೇಟಿ ನೀಡಬೇಕು. ಜನರ ನಡುವೆ ಇದ್ದುಕೊಂಡು ಸರ್ಕಾರವು ನಿಮ್ಮ ಜತೆ ಇದೆ ಎಂದು ಧೈರ್ಯ ತುಂಬಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾಲಾಟ್ಕರ್, ನಗರಪಾಲಿಕೆ ಉಪ ಆಯುಕ್ತ ಸೋಮಶೇಖರ್, ಡಿಸಿಪಿ ಕೆ.ಎಸ್.ಸುಂದರ್‌ರಾಜ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಎ.ಎಸ್.ರಂಜಿತ್, ಸೆಸ್ಕ್ ಅಧೀಕ್ಷಕ ಇಂಜಿನಿಯರ್ ಸುನೀಲ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net