ಮುಷ್ಕರ ನಿರತ ನೌಕರರ ವಿರುದ್ಧ ಕ್ರಮಕ್ಕೆ ಎನ್‌ಎಚ್‌ಎಂ ಸೂಚನೆ

Health
Published on

ಬೆಂಗಳೂರು: ಸಮಾನ ವೇತನ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ಕೈಗೊಂಡಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಆರೋಗ್ಯದ ಅಭಿಯಾನದ (ಎನ್‌ಎಚ್‌ಎಂ) ನಿರ್ದೇಶಕರು ಅಧಿಕಾರಿಗಳಿಗೆ ಸೂಚನೆ ನಿಡಿದ್ದಾರೆ.

ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ 30 ಸಾವಿರಕ್ಕೂ ಅಧಿಕ ನೌಕರರು ನಡೆಸುತ್ತಿರುವ ಮುಷ್ಕರದಿಂದ ವಿವಿಧ ಆರೋಗ್ಯ ಕಾರ್ಯಕ್ರಮಗಳಿಗೆ ಹಿನ್ನಡೆಯಾಗಿದ್ದು, ದೈನಂದಿನ ವರದಿ ಸಲ್ಲಿಕೆ ಸಮರ್ಪಕವಾಗಿ ನಡೆಯುತ್ತಿಲ್ಲ. ಅದೇ ರೀತಿ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ವಿವಿಧಡೆ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯದಿಂದ ರೋಗಿಗಳಿಗೆ ಸಮಸ್ಯೆಯಾಗುತ್ತಿದೆ.

ಸಾಂಕ್ರಾಮಿಕ ರೋಗ ಕೋವಿಡ್ ವಿರುದ್ಧ ರಾಜ್ಯ ಹೋರಾಟ ನಡೆಸುತ್ತಿರುವ ಈ ಸಂದರ್ಭದಲ್ಲಿ ಎಲ್ಲ ಆರೋಗ್ಯ ಸಿಬ್ಬಂದಿ ನಿರಂತರವಾಗಿ ಸೇವೆ ಸಲ್ಲಿಸುವ ಅಗತ್ಯವಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಸಹ ಈ ಕಾರ್ಯದಲ್ಲಿ ಶ್ರಮಿಸಬೇಕು. ಅದನ್ನು ಬಿಟ್ಟು ಆರೋಗ್ಯ ಸೇವೆ ಒದಗಿಸುವಲ್ಲಿ ಸಹಕಾರ ನೀಡದೆ, ವರದಿಗಳನ್ನು ಸಲ್ಲಿಸದಿರುವುದು ಸಾರ್ವಜನಿಕ ಹಿತದೃಷ್ಟಿಯಿಂದ ಸೂಕ್ತವಲ್ಲ. ಸಿಬ್ಬಂದಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದೊಂದಿಗೆ ಒಡಂಬಡಿಕೆ ಮಾಡಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಅಸಹಾಕಾರ ತೋರುವ ನೌಕರರ ವಿರುದ್ಧ ಕ್ರಮ ಕೈಗೊಳ್ಳವಂತೆ ಎನ್‌ಎಚ್‌ಎಂ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಎನ್‌ಎಚ್‌ಎಂ ನಿರ್ದೇಶಕರ ಈ ನಡೆಗೆ ಆರೋಗ್ಯ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದು, ವೇತನ ಹೆಚ್ಚಳ, ಪದೋನ್ನತಿ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಗಣನೆಗೆ ತೆಗೆದುಕೊಳ್ಳಲಿಲ್ಲ. ಮುಷ್ಕರ ನಡೆಸುವ ಬಗ್ಗೆ ಸರ್ಕಾರಕ್ಕೆ ಮೊದಲೇ ತಿಳಿಸಲಾಗಿತ್ತು. ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಅಧಿಕಾರಿಗಳು ಗದಾಪ್ರಹಾರ ಮಾಡಲು ಹೊರಟಿದ್ದಾರೆ. ಬೇಡಿಕೆಗಳು ಈಡೇರುವವರೆಗೂ ಮುಷ್ಕರದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ವಿಶ್ವಾರಾಧ್ಯ ಯಮೋಜಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net