

ಬೆಳಗಾವಿ: ವಿಧಾನ ಪರಿಷತ್ ವಾಯವ್ಯ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರಗಳ ಚುನಾವಣೆ ಘೋಷಣೆಯಾಗಿದ್ದು, ಮೇ 13ರಿಂದಲೇ ನೀತಿಸಂಹಿತೆ ಜಾರಿಯಾಗಿದೆ. ಎಲ್ಲ ರಾಜಕೀಯ ಪಕ್ಷಗಳು ಮಾದರಿ ನೀತಿಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ಹೊಸ ಯೋಜನೆ, ಕಾರ್ಯಕ್ರಮಗಳನ್ನು ಘೋಷಿಸುವಂತಿಲ್ಲ. ಪ್ರಚಾರ ಕೂಡ ಕರೊನಾ ಮಾರ್ಗಸೂಚಿ ಪ್ರಕಾರ ನಡೆಸಬೇಕಾಗುತ್ತದೆ. ಈ ಬಗ್ಗೆ ಚುನಾವಣಾ ಆಯೋಗ ಮಾರ್ಗಸೂಚಿ ಪ್ರಕಟಿಸಲಿದೆ. ಚುನಾವಣಾ ಪ್ರಚಾರ ಸಭೆ, ವಾಹನ ಬಳಕೆ ಸೇರಿ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಅಗತ್ಯ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು.
ಧಾರ್ಮಿಕ ಕೇಂದ್ರಗಳಲ್ಲಿ ಯಾವುದೇ ರೀತಿಯ ಪ್ರಚಾರ ಸಭೆ ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ವಿವರಿಸಿದರು. ಎಲ್ಲ ರಾಜಕೀಯ ಪಕ್ಷಗಳು ಮಾದರಿ ನೀತಿಸಂಹಿತೆ ಪಾಲಿಸಬೇಕು . ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕಕ್ಕಿಂತ 10 ದಿನಗಳ ಮುಂಚೆಯವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ನಿಗದಿತ ದಿನಾಂಕದ ಬಳಿಕ ಸಲ್ಲಿಕೆಯಾಗುವ ಅರ್ಜಿಗಳನ್ನು ಈ ಚುನಾವಣಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೆ ಪರಿಗಣಿಸುವುದಿಲ್ಲ ಎಂದು ಡಿಸಿ ಸ್ಪಷ್ಟಪಡಿಸಿದರು.
ಚುನಾವಣಾ ವೇಳಾಪಟ್ಟಿ ಪ್ರಕಟ: ವಿಧಾನ ಪರಿಷತ್‌ನ ವಾಯವ್ಯ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರಗಳ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡಿದೆ. ಜೂನ್ 13 ರಂದು ಮತದಾನ ನಡೆಯಲಿದ್ದು, ಜೂನ್ 15ರಂದು ಮತ ಎಣಿಕೆ ನಡೆಯಲಿದೆ. ಮೇ 19ರಂದು ಅಧಿಸೂಚನೆ ಪ್ರಕಟಿಸಲಾಗುವುದು; ನಾಮಪತ್ರ ಸಲ್ಲಿಕೆಗೆ ಮೇ 26 ಕಡೆಯ ದಿನವಾಗಿರುತ್ತದೆ; ನಾಮಪತ್ರಗಳ ಪರಿಶೀಲನೆ ಮೇ 27 ರಂದು ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ 30 ಕೊನೆಯ ದಿನವಾಗಿದ್ದು, ಒಟ್ಟಾರೆ ಚುನಾವಣಾ ಪ್ರಕ್ರಿಯೆಯು ಜೂನ್ 17 ರಂದು ಮುಕ್ತಾಯವಾಗಲಿದೆ.
ಮತಗಟ್ಟೆಗಳ ಕರಡು ಪಟ್ಟಿ ಪ್ರಕಟ: ನಾಲ್ಕು ಉಪ ಮತಗಟ್ಟೆಗಳು ಸೇರಿ ಒಟ್ಟು 82 ಮತಗಟ್ಟೆಗಳನ್ನು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ದಿನಾಂಕ 9-5-2022 ರಂತೆ ಪದವೀಧರ ಕ್ಷೇತ್ರದಲ್ಲಿ ಒಟ್ಟು 43,798 ಮತದಾರರು ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 13,572 ಮತದಾರರಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕಕ್ಕಿಂತ 10 ದಿನಗಳ ಮುಂಚೆಯವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿಗಳನ್ನು ಸ್ವೀಕರಿಸಲು ಅವಕಾಶವಿರುತ್ತದೆ ಎಂದು ವಿವರಿಸಿದರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಅಭಯ ಅವಲಕ್ಕಿ, ರಾಜು ಕೋಪರಿ, ವಿ.ಬಿ.ರೇವಡಿ, ಕೆ.ಜಿ.ಪಾಟೀಲ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು.