

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ. ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೆ.ಆರ್.ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆ ಸೃಜಿಸುವಾಗ ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ ಎಂದು ಕುಟುಕಿದರು.
ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಅಪರಾಧ ಪ್ರಕರಣಗಳ ವಿರುದ್ಧ ಕಠಿಣ ಕ್ರಮವಾಗುತ್ತದೆ. ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದ್ದು, ಬಿಜೆಪಿ ಅವಧಿಗೆ ಹೋಲಿಸಿದರೆ ನಮ್ಮ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಿದೆ. ಅಪರಾಧಗಳನ್ನು ಗಮನಾರ್ಹವಾಗಿ ಕಡಿಮೆ ಮಾಡಲು ಸರ್ಕಾರ ಖಂಡಿತ ಪ್ರಯತ್ನಿಸುತ್ತದೆ ಎಂದರು.