

ಮೂಡಿಗೆರೆ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಚಪ್ಪಲಿ ಎಸೆದ ವಕೀಲನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಬಿಎಸ್ಪಿ ರಾಜ್ಯ ಉಪಾಧ್ಯಕ್ಷ ಜಾಕಿರ್ ಹುಸೇನ್ ಒತ್ತಾಯಿಸಿದರು.
ಬಿಎಸ್ಪಿ ಕ್ಷೇತ್ರ ಸಮಿತಿಯಿಂದ ಗುರುವಾರ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಎಸ್.ಅಶ್ವಿನಿ ಅವರ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿ ಬಳಿಕ ಮಾತನಾಡಿ, ನ್ಯಾಯಾಂಗಕ್ಕೆ ವಿಶೇಷವಾದ ಸ್ಥಾನಮಾನ ಹಾಗೂ ಗೌರವವಿದೆ. ನ್ಯಾಯಾಂಗ ಗಟ್ಟಿಯಾಗಿರುವ ಕಾರಣ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಜೀವಂತವಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ವಕೀಲ ರಾಕೇಶ್ ಕಿಶೋರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಪ್ರಕರಣ ಮರುಕಳಿಸದಂತೆ ಸರ್ಕಾರ ಕಟ್ಟೆಚ್ಚರ ವಹಿಸಬೇಕು. ನ್ಯಾಯಾಂಗದ ಮೇಲಿನ ದಾಳಿಯು ಪ್ರಜಾಪ್ರಭುತ್ವದ ಮೇಲೆ ಮತ್ತು ಭಾರತದ ಸಾರ್ವಭೌಮತ್ವದ ಮೇಲೆ ನಡೆದಿರುವ ದಾಳಿಯಾಗಿದೆ ಎಂದರು.
ಬಿಎಸ್ಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಲೋಕವಳ್ಳಿ ರಮೇಶ್ ಮಾತನಾಡಿ, ಈ ದಾಳಿಯ ಹಿಂದೆ ಜಾತಿ ವ್ಯವಸ್ಥೆ ತಾಂಡವವಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ದಲಿತ, ಬೌದ್ಧ ಧರ್ಮದವರು ಮತ್ತು ಅಲ್ಪಸಂಖ್ಯಾತರು ಭಾರತದಲ್ಲಿ ಉನ್ನತ ಮಟ್ಟದ ಪದವಿ ಹೊಂದುವುದನ್ನು ಕೆಲ ದುರುಳರು ವಿರೋಧಿಸುತ್ತಲೆ ಬಂದಿದ್ದಾರೆ. ನ್ಯಾಯಪೀಠದ ಮುಂದೆ ಹೇಗೆ ನಡೆದುಕೊಳ್ಳಬೇಕು ಎಂಬ ಕನಿಷ್ಠ ಪರಿಜ್ಞಾನವಿಲ್ಲದ ಈ ವಕೀಲನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಹಾಗೂ ಉನ್ನತ ಮಟ್ಟದ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ನಿರ್ಲಕ್ಷೃ ವಹಿಸಿದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಬೆಟ್ಟಗೆರೆ ಗ್ರಾಪಂ ಅಧ್ಯಕ್ಷ ಕುಮಾರ್, ಮುಖಂಡರಾದ ಬಿ.ಎಂ.ಶಂಕರ್, ಮಮ್ತಾಜ್, ಅಬ್ರಾರ್ ಅಹಮದ್, ಹಮೀದ್ ಬಿಳಗುಳ, ಹೊನ್ನೇಶ್, ಲಕ್ಷ್ಮಣ್ ದೊಡ್ಡಯ್ಯ, ಫಿಶ್ ಮೋಣು, ವಸಂತಕುಮಾರ್ ಇತರರಿದ್ದರು.