ಬೆಂಗಳೂರು:
ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಗೈರಾಗಿದ್ದಾರೆ.
ಪ್ರಕರಣದ ಆರೋಪಿಗಳಾದ ಕೆ.ಜೆ.ಜಾರ್ಜ್, ಎ.ಎಂ.ಪ್ರಸಾದ್‌ಗೆ ಸೆ.28ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಆದರೆ, ಇದೀಗ ಎಲ್ಲೆಡೆ ಕರೋನಾ ಹಾವಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಕಾರಣ ನೀಡಿ ಗೈರಾಗಲು ಅವಕಾಶಗಳಿವೆ. ಈ ಹಿನ್ನೆಲೆಯಲ್ಲಿ ಜಾರ್ಜ್ ಸಹ ಕಾರಣ ನೀಡಿ ಗೈರಾಗಿದ್ದಾರೆ ಎನ್ನಲಾಗಿದೆ.
ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಅ.5ಕ್ಕೆ ಮುಂದೂಡಿದೆ.
ಗಣಪತಿ ಸಾವಿನ ಪ್ರಕರಣದಲ್ಲಿ ಸಿಬಿಐ ಬಿ ವರದಿ ಸಲ್ಲಿಸಿರುವುದಕ್ಕೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತ್ತು. ಆತ್ಮಹತ್ಯೆ ಪ್ರಚೋದನೆಗೆ ಸಾಕಷ್ಟು ಸಾಕ್ಷ್ಯಗಳಿದ್ದರೂ ‘ಬಿ’ ವರದಿ ನೀಡಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು.