ವಿದ್ಯಾರ್ಥಿನಿ ಆತ್ಮಹತ್ಯೆ ತನಿಖೆ ಭರವಸೆ

kimmane
Published on

ಕೊಪ್ಪ: ವಸತಿ ಶಾಲೆಯಲ್ಲಿ ಮೃತಪಟ್ಟ ಬಾಲಕಿ, ಆಕೆಯ ಕುಟುಂಬಕ್ಕೆ ನ್ಯಾಯ ದೊರಕಿಸಲು ಪ್ರಯತ್ನಿಸಲಾಗುತ್ತದೆ. ಈ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಸಲು ಸರ್ಕಾರದ ಕ್ರಮಕ್ಕಾಗಿ ಮನವಿ ಮಾಡಲಾಗುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.

ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಮನೆಗೆ ಸೋಮವಾರ ಭೇಟಿ ನೀಡಿ ಪಾಲಕರಿಗೆ ಸಾಂತ್ವನ ಹೇಳಿದ ಬಳಿಕ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಲಕಿ ಸಾವಿನ ಕಾರಣದ ಕುರಿತು ಅನುಮಾನ ಇದ್ದರೆ ಬರವಣಿಗೆ ಮೂಲಕ ನನಗೆ ಕೊಡಿ ಎಂದು ಪಾಲಕರನ್ನು ಕೇಳಿದ್ದೇನೆ. ಅದನ್ನು ಮುಚ್ಚಿದ ಲಕೋಟೆ ಮೂಲಕ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು, ಗೃಹಮಂತ್ರಿ, ಮುಖ್ಯಮಂತ್ರಿ ಅವರಿಗೆ ಕಳಿಸಿ ಸೂಕ್ತ ತನಿಖೆಗೆ ಒತ್ತಾಯಿಸುತ್ತೇನೆ ಎಂದರು.

ಶಾಸಕ ಟಿ.ಡಿ.ರಾಜೇಗೌಡ ಅವರು ಗುಜರಾತ್ ಪ್ರವಾಸದಲ್ಲಿದ್ದಾರೆ. ಅವರು ಬಂದ ಕೂಡಲೇ ಬಾಲಕಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವರು. ಘಟನೆ ಮರುಕಳಿಸಬಾರದು. ಬೇಜವಾಬ್ದಾರಿ ಅಧಿಕಾರಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಕೆಪಿಸಿಸಿ ವಕ್ತಾರ ಸುಧೀರ್‌ಕುಮಾರ್ ಮುರೊಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕುಡಿಗೆ ರವೀಂದ್ರ, ಮುಖಂಡರಾದ ಡಿ.ಎಸ್.ವಿಶ್ವನಾಥ ಶೆಟ್ಟಿ, ಪೂರ್ಣೇಶ್, ಓಣಿತೋಟ ರತ್ನಾಕರ್, ನುಗ್ಗಿ ಮಂಜುನಾಥ್, ಹೊಸೂರ್ ಪ್ರಶಾಂತ್, ಎಂ.ಸಿ.ಅಶೋಕ್, ಸಂದೇಶ್, ಶೇಖರ್ ಪೂಜಾರಿ, ಸಂತೋಷ್ ಕುಲಾಸೋ, ಸುಹಾಸ್, ರಜಿತ್, ಅಂಜನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net