ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಾಂಶುಪಾಲೆ ಸೇರಿ ಐವರ ಬಂಧನ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಾಂಶುಪಾಲೆ ಸೇರಿ ಐವರ ಬಂಧನ
Published on

 ಹಾಸನ: ಬೇಲೂರು ತಾಲೂಕು ಹಳೇಬೀಡು ಹೊರವಲಯದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿಶಾಲೆಯಲ್ಲಿ ನಡೆದಿರುವ ಅಕ್ರಮ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ವಸತಿಶಾಲೆಯ ಪ್ರಾಂಶುಪಾಲೆ ಸೇರಿದಂತೆ ಐವರನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಪ್ರಕರಣದ ವಿವರ ನೀಡಿದ ಅವರು, ಬೇಲೂರು ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪ್ರಾಂಶುಪಾಲೆ ಗೀತಾಬಾಯಿ, ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪುನೀತ್, ಶಿಕ್ಷಕ ಶಿವಯ್ಯ, ಅಟೆಂಡರ್ ಶೃತಿ ಮತ್ತು ಗಣಿತ ಶಿಕ್ಷಕ ವಿಜಯ ಕುಮಾರ್ ಎಂಬ ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ನಡೆಯುತ್ತಿರುವ ಹಳೇಬೀಡು ಕಿತ್ತೂರು ಚೆನ್ನಮ್ಮ ವಸತಿಶಾಲೆಯಲ್ಲಿ ಲೌಂಗಿಕ ದೌರ್ಜನ್ಯ ಕುರಿತು ವಿದ್ಯಾರ್ಥಿಗಳು ಮಂಗಳವಾರ ರಾತ್ರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ವಸತಿ ನಿಲಯಕ್ಕೆ ಕ್ಷೇತ್ರದ ಶಾಸಕ ಕೆ.ಎಸ್. ಲಿಂಗೇಶ್ ಅವರು ಪೊಲೀಸರು ಮತ್ತು ಮಹಿಳಾ ಮತ್ತು ಮಕ್ಕಳ ರಕ್ಷಣಾ ಸಮಿತಿ ಸದಸ್ಯರೊಂದಿಗೆ ಭೇಟಿ ನೀಡಿ ಮಕ್ಕಳ ದೂರು ಆಲಿಸಿದ್ದರು. ಹಲವು ಬಾಲಕಿಯರು ತಮ್ಮ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ಕುರಿತು ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನಾಧರಿಸಿ ಮಹಿಳಾ ಮತ್ತು ಮಕ್ಕಳ ರಕ್ಷಣಾ ಸಮಿತಿಯು ಹಳೇಬೀಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು ಎಂದು ಪ್ರಕರಣದ ವಿವರ ನೀಡಿದರು.

8 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಮೇಲ್ನೋಟದ ತನಿಖೆಯಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಎಸ್‌ಸಿ/ಎಸ್‌ಟಿ ಕಾಯ್ದೆ ಹಾಗೂ ಪೋಕ್ಸೊ ಕಾಯ್ದೆ ಅಡಿ ಐವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದರು.

300 ವಿದ್ಯಾರ್ಥಿಗಳಿಗೆ ದಿನಕ್ಕೆ ಒಂದು ಕೆಜಿ ಬೇಳೆ, ಒಂದು ಲೀಟರ್ ಅಡುಗೆ ಎಣ್ಣೆ, ಒಂದು ಲೀಟರ್ ಹಾಲು, ಮೂರು ಲೀಟರ್ ಮೊಸರು ಮಾತ್ರ ಅಡುಗೆ ಮಾಡಲು ಒದಗಿಸಲಾಗುತ್ತಿತ್ತು. ಗುಣಮಟ್ಟದ ಆಹಾರ ದೊರೆಯುತ್ತಿರಲಿಲ್ಲ ಎಂಬ ದೂರುಗಳು ಸಹ ಇವೆ. ಈ ಕುರಿತು ಸಹ ತನಿಖೆ ನಡೆಯಲಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net