

ರಾಜ್ಯ ಸರ್ಕಾರ ಭೋವಿ ಸಮಾಜದ ಒಬ್ಬರನ್ನಾದರೂ ವಿಧಾನ ಪರಿಷತ್‌ಗೆ ಆಯ್ಕೆ ಮಾಡಬೇಕು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ.ಸೀತಾರಾಂ ಮನವಿ ಮಾಡಿದರು.
ಪರಿಶಿಷ್ಟ ಜಾತಿಗೆ ಸೇರಿರುವ ಭೋವಿ ಸಮಾಜ ಮೊದಲಿನಿಂದಲೂ ಕಾಂಗ್ರೆಸ್ ಪರವಾಗಿ ನಿಂತಿದೆ. ಆದರೆ ಪರಿಶಿಷ್ಟ ಜಾತಿಯವರನ್ನು ವಿಧಾನ ಪರಿಷತ್ತಿಗೆ ನೇಮಕ ಮಾಡುವ ಸಂದರ್ಭ ಬಂದಾಗೆಲ್ಲ ಪ್ರಬಲರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಮ್ಮ ಸಮಾಜದ ಅಭ್ಯರ್ಥಿಗೆ ಟಿಕೆಟ್ ನೀಡಿಲ್ಲ. ರಾಜ್ಯಸಭಾ ಸದಸ್ಯರಾಗಿಯೂ ನೇಮಕ ಮಾಡಿಲ್ಲ. ಇದರಿಂದ ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆರ್.ಗುಂಡೂರಾವ್ ಅವರು ಮುಖ್ಯಮಂತ್ರಿ ಆಗಿದ್ದಾಗ ಭೋವಿ ಸಮಾಜದ ಆರ್.ಪೀರಣ್ಣ ಎಂಬುವರನ್ನು ವಿಧಾನ ಪರಿಷತ್ ಸದಸ್ಯರಾಗಿ ನೇಮಕ ಮಾಡಿದ್ದರು. ಅಂದಿನಿಂದ ಇಂದಿನವರೆಗೂ ನಮ್ಮ ಸಮಾಜದವರನ್ನು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡಿಲ್ಲ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ನಮ್ಮ ಸಮಾಜದ ಮೇಲೆ ಅಪಾರವಾದ ಪ್ರೀತಿ ಇದೆ. ಸಮಾಜದ ಒಬ್ಬರನ್ನು ವಿಧಾನ ಪರಿಷತ್ ಸದಸ್ಯರನ್ನು ಮಾಡಬೇಕು ಎಂದು ಸಮಾಜದ ಮುಖಂಡರು ಮತ್ತು ಸ್ವಾಮೀಜಿಗಳ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದಷ್ಟು ಬೇಗ ನಮ್ಮ ಸಮಾಜದ ಒಬ್ಬರನ್ನು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡಬೇಕು ಎಂದು ಕೋರಿದರು.
ಭೋವಿ ಸಮಾಜದ ಪ್ರಧಾನ ಕಾರ್ಯದರ್ಶಿ ಪರಮೇಶ್, ಖಜಾಂಚಿ ಬಸವರಾಜು, ಮುಖಂಡರಾದ ರಾಮಸ್ವಾಮಿ, ಎಚ್.ಕೆ.ದೇವರಾಜ್, ಎಚ್.ದಾಸ್ ಹಾಜರಿದ್ದರು.