ಸರ್ಕಾರಿ ಶಾಲೆ ಪ್ರಗತಿ ಕೀಲಿ ಶಿಕ್ಷಕರ ಕೈಲಿ

HYR govt school 12
Published on

ಹಿರಿಯೂರು; ಸರ್ಕಾರಿ ಶಾಲೆ ಉಳಿವು, ಪ್ರಗತಿ ಶಿಕ್ಷಕರ ಶ್ರಮ, ಬದ್ಧತೆಯಲ್ಲಿ ಅಡಗಿದೆ ಎಂದು ಜಿಲ್ಲಾ ಸಚಿವ ಡಿ.ಸುಧಾಕರ್ ಹೇಳಿದರು.

ತಾಲೂಕಿನ ಪಟ್ರೆಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕೊಠಡಿ ನಿರ್ಮಾಣಕ್ಕೆ ಗುರುವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಶಿಕ್ಷಕರ ಪರಿಶ್ರಮದಿಂದ ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ ಲಭ್ಯವಾಗುತ್ತಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಗ್ರಾಮೀಣ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸಲು ದೇಶದಲ್ಲೇ ವಿನೂತನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಸರ್ಕಾರಿ ಶಾಲೆಗಳಿಗೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲು ವಿಶೇಷ ಆದ್ಯತೆ ನೀಡಲಾಗುವುದು ಎಂದರು.

ಶಿಕ್ಷಕರ ಪರಿಶ್ರಮ, ಕ್ರೀಯಾಶೀಲತೆಯಿಂದ ಮಾತ್ರ ಗುಣಮಟ್ಟದ ಶಿಕ್ಷಣ ನಿರೀಕ್ಷಿಸಬಹುದಾಗಿದೆ. ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜತೆ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ನೆರವಾಗಲು ಸುಸಜ್ಜಿತ ಲ್ಯಾಬ್, ಸ್ಮಾರ್ಟ್ ಕ್ಲಾಸ್, ಆಟದ ಮೈದಾನ, ಗ್ರಂಥಾಲಯ, ಶುದ್ಧ ಕುಡಿವ ನೀರು, ಶುಚಿ-ರುಚಿಯಾದ ಬಿಸಿಯೂಟ ವ್ಯವಸ್ಥೆಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಬಿಇಒ ತಿಪ್ಪೇಸ್ವಾಮಿ ಮಾತನಾಡಿ, ಗುಣಮಟ್ಟದ ಶಿಕ್ಷಣದ ಜತೆ ಮಕ್ಕಳಲ್ಲಿ ಮಾನವೀಯ ಮೌಲ್ಯ, ದೇಶ ಪ್ರೇಮ, ನಾಯಕತ್ವ ಗುಣ, ಸಮಾಜಮುಖಿ ಚಿಂತನೆಗಳನ್ನು ಬೆಳೆಸಲು ಆದ್ಯತೆ ನೀಡಲಾಗುವುದು. ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ ಎಂದರು.

ಗ್ರಾಪಂ ಅಧ್ಯಕ್ಷೆ ಸಣ್ಣಮ್ಮ, ಸದಸ್ಯೆ ನಾಸಿರಬಾನು, ಪಿಡಿಒ ರಾಜೇಶ್ವರಿ, ಜಿಪಂ ಮಾಜಿ ಸದಸ್ಯ ಆರ್.ನಾಗೇಂದ್ರನಾಯ್ಕ, ಮುನೀರ್, ಕಾಂತರಾಜ್, ಸೋಮಸುಂದರ್, ಮಹೇಶ್, ಮಣಿ, ರಾಜು, ಗಿರೀಶ್, ದಾದಾಪೀರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net