ಸಾಧನೆ ಸಮಾವೇಶದ ಹೆಸರಿನಲ್ಲಿ ಪ್ರಧಾನಿ ವಿರುದ್ಧ ಸಲ್ಲದ ಟೀಕೆ

ಸಾಧನೆ ಸಮಾವೇಶದ ಹೆಸರಿನಲ್ಲಿ ಪ್ರಧಾನಿ ವಿರುದ್ಧ ಸಲ್ಲದ ಟೀಕೆ
Published on

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ಸರ್ಕಾರಿ ಕಾರ್ಯಕ್ರಮ ಹೆಸರಿನಲ್ಲಿ ಶಕ್ತಿ ಪ್ರದರ್ಶನದ ಸಮಾವೇಶ ಮಾಡಿದೆ. ಜತೆಗೆ ಇಡೀ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡಲು ವೇದಿಕೆ ಬಳಸಿಕೊಂಡು ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಆರೋಪಿಸಿದ್ದಾರೆ.

ಕಾರ್ಯಕ್ರಮ ಆಹ್ವಾನ ಪತ್ರಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿತ್ತು. ಮೈಸೂರು ಜಿಲ್ಲೆಗೆ ಸಂಬಂಧಪಡದ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸಿಂಗ್ ಸುರ್ಜೇವಾಲ ಅವರ ಹೆಸರು ಹಾಕಲಾಗಿತ್ತು. ಆದರೆ, ಮಾಜಿ ಪ್ರಧಾನಿ ಹಾಗೂ ಹಿರಿಯ ರಾಜ್ಯಸಭಾ ಸದಸ್ಯರಾದ ಎಚ್.ಡಿ. ದೇವೇಗೌಡರ ಹೆಸರೇಕೆ ಹಾಕಿಲ್ಲ ಎಂದು ಪ್ರಶ್ನಿಸಿದರು. ಕೇಂದ್ರ ಸಚಿವವರಾದ ಎಚ್.ಡಿ. ಕುಮಾರಸ್ವಾಮಿ ಮತ್ತು ಪ್ರಹ್ಲಾದ್ ಜೋಶಿ ಅವರ ಹೆಸರು ಕೈಬಿಡಲಾಗಿತ್ತು. ಈ ಸಾಧನಾ ಸಮಾವೇಶಕ್ಕೂ ಸುರ್ಜೇವಾಲಗೂ ಏನು ಸಂಬಂಧ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ಮೈಸೂರಿನಲ್ಲಿ ನಡೆದ ಸಮಾವೇಶ ಸರ್ಕಾರದ ಸಾಧನಾ ಸಮಾವೇಶವೋ ಅಥವಾ ಪಕ್ಷದ ಸಮಾವೇಶವೋ ಎಂಬುದನ್ನು ಮುಖ್ಯಮಂತ್ರಿಗಳು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ಇಡೀ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ತೆಗಳುವ ಕಾರ್ಯಕ್ರಮ ಮಾಡಿದ್ದಾರೆ. ದೇಶಕ್ಕೆ, ರಾಜ್ಯಕ್ಕೆ ಮೋದಿ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ. ಮೈಸೂರು ಜಿಲ್ಲೆಗೆ ಕೇಂದ್ರ ಸರ್ಕಾರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆಂದೇ 2,627 ಕೋಟಿ ರೂ.ಅನುದಾನ ಕೊಟ್ಟಿದೆ. ಮೈಸೂರಿನಲ್ಲಿ ರೈಲ್ವೆ ಕೆಳ ಸೇತುವೆ ನಿರ್ಮಾಣಕ್ಕೆ ಅನುದಾನ ಕೊಟ್ಟಿದೆ. ಜಲಜೀವನ್ ಮಿಷನ್ ಯೋಜನೆಯಡಿ ಮೈಸೂರಿಗೆ 1,393 ಕೋಟಿ ರೂ.ಅನುದಾನ ನಿಡಿದೆ. ಇದ್ಯಾವುದನ್ನೂ ಸ್ಮರಿಸದೇ ಸಾಧನಾ ಸಮಾವೇಶ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಮುದ್ರಾ ಯೋಜನೆಯಡಿ ಮೈಸೂರು ಜಿಲ್ಲೆಗೆ 3 ಸಾವಿರ ಕೋಟಿಗೂ ಅಧಿಕ ಅನುದಾನ ಸಿಕ್ಕಿದೆ. ವಿಶ್ವಕರ್ಮ ಯೋಜನೆಯಲ್ಲಿ 6 ಸಾವಿರ ಜನರಿಗೆ ತರಬೇತಿ ನೀಡಲಾಗುತ್ತಿದೆ. ಮುದ್ರಾ ಯೋಜನೆಯಲ್ಲಿ ಮೈಸೂರು ಜಿಲ್ಲೆಯಾದ್ಯಂತ 5,38,000 ಲಾನುಭವಿಗಳಿದ್ದಾರೆ. ಈ ಯೋಜನೆಯಡಿ ಇದುವರೆಗೂ 10 ಸಾವಿರ ಕೋಟಿಗೂ ಹೆಚ್ಚಿನ ಅನುದಾನ ನೀಡಲಾಗಿದೆ. ಅದರೂ ಮೈಸೂರು ಜಿಲ್ಲೆಗೆ ಕೇಂದ್ರ ಏನನ್ನೂ ಕೊಟ್ಟಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net