ಸಾಮಾಜಿಕ ಮೌಲ್ಯಗಳ ಸಂರಕ್ಷಣೆಗೆ ಎನ್‌ಎಸ್‌ಎಸ್ ಸಹಕಾರಿ

ಬೆಟ್ಟದಪುರದ ಎಸ್‌ಎಂಎಸ್ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಘಟಕವನ್ನು ಕುಶಾಲನಗರದ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸಿ.ಪುಟ್ಟರಾಜು ಉದ್ಘಾಟಿಸಿದರು. ಬಿ.ವಿ ಮಂಜುನಾಥ್, ರಾಜು, ಕುಬೇರ, ವೆಂಕಟೇಶ್, ಗೋವಿಂದ್, ಸತಿಶ್, ಹರ್ಷಿತ ಇದ್ದರು.
BTP04Photo1
Published on

ಬೆಟ್ಟದಪುರ: ಆಧುನಿಕ ಯುಗದ ಎಲ್ಲ ರಂಗದಲ್ಲಿಯೂ ಸಾಮಾಜಿಕ ಮೌಲ್ಯಗಳ ಸಂರಕ್ಷಣೆ ಮಾಡುವ ಮೂಲ ಉದ್ದೇಶದಿಂದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯನಿರ್ವಹಿಸುತ್ತಿದೆ ಎಂದು ಕುಶಾಲನಗರದ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸಿ.ಪುಟ್ಟರಾಜು ಅಭಿಪ್ರಾಯಪಟ್ಟರು.
ಬೆಟ್ಟದಪುರದ ಎಸ್‌ಎಂಎಸ್ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಘಟಕವನ್ನು ಉದ್ಘಾಟಿಸಿ ಮಾತನಾಡಿ, ಎನ್‌ಎಸ್‌ಎಸ್ ದೇಶದಲ್ಲಿ ಸ್ವಯಂ ಸೇವಕರ ಸಂಘಟನೆಯಾಗಿದೆ. ಸ್ವಯಂ ಸೇವಕರಿಗೆ ರಾಷ್ಟ್ರದ ಮನೋಭಾವದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ ಎಂದರು.


ಕಾಲೇಜು ಹಂತದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗವಹಿಸುವ ಮೂಲಕ ವಿದ್ಯೆಯೊಂದಿಗೆ ಮತ್ತಷ್ಟು ಜ್ಞಾನವನ್ನು ಸಂಪಾದನೆ ಮಾಡಿಕೊಳ್ಳಬಹುದು. ಸಿಗುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಿ. ಇದರಿಂದ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದರು.


ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಬಿ.ವಿ.ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಗಳ ಅನಾವರಣ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಒಂದು ಅತ್ಯುತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net