ಸಾಲ ಪಡೆದು 439.7 ಕೋಟಿ ರೂ. ವಂಚನೆ ಆರೋಪ : ರಮೇಶ್ ಜಾರಕಿಹೊಳಿಗೆ ಚಾರ್ಜ್‌ಶೀಟ್‌ಗೆ ಸೂಚನೆ

highcourt
Published on

ಬೆಂಗಳೂರು: ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ಅಭಿವೃದ್ಧಿಗಾಗಿ ಅಪೆಕ್ಸ್ ಬ್ಯಾಂಕ್‌ನಿಂದ ಪಡೆದ ಸಾಲ ಮರುಪಾವತಿಸದ ಆರೋಪದಡಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾದ ಪ್ರಕರಣ ಸಂಬಂಧಿಸಿದಂತೆ ದೋಷಾರೋಪ ಪಟ್ಟಿ ಸಲ್ಲಿಸಲು ಸಿಐಡಿಗೆ ಹೈಕೋರ್ಟ್ ಅನುಮತಿ ನೀಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಹಾಗೂ ಸಿಐಡಿ ನಡೆಸುತ್ತಿರುವ ತನಿಖೆ ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಬೆಳಗಾವಿಯ ಗೋಕಾಕದಲ್ಲಿರುವ ಸೌಭಾಗ್ಯಲಕ್ಷ್ಮಿ ಶುಗರ್ ಕಾರ್ಖಾನೆಗಾಗಿ 232.88 ಕೋಟಿ ರೂ. ಸಾಲ ಪಡೆಯಲಾಗಿತ್ತು. ಅದು ಈಗ 439.7 ಕೋಟಿ ರೂ. ಆಗಿದೆ. ಸಾಲ ಪಡೆಯುವ ವೇಳೆ ಸಕ್ಕರೆ ಕಾರ್ಖಾನೆಗೆ ಜಾರಕಿಹೊಳಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

ಆದರೆ, ಸಾಲ ಬಾಕಿಯಿರುವ ಅವಧಿಯಲ್ಲೇ ರಮೇಶ್ ಜಾರಕಿಹೊಳಿ ನಿರ್ದೇಶಕರ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಆ ಹುದ್ದೆಗಳಿಗೆ ಬೇರೆಯವರು ನೇಮಕಗೊಂಡಿದ್ದಾರೆ. ಈ ವಿಚಾರವನ್ನು ತಮ್ಮ ಗಮನಕ್ಕೆ ತಂದಿಲ್ಲ ಹಾಗೂ ಸಾಲ ಮರು ಪಾವತಿಸದೆ ವಂಚಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು 2024 ರ ಜ.5ರಂದು ಬೆಂಗಳೂರಿನ ವಿ.ವಿ ಪುರಂ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ರಾಜ್ಯ ಗೃಹ ಇಲಾಖೆ ಆದೇಶಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net