

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಶುಕ್ರವಾರ ನಗರದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ರಾಮಸ್ವಾಮಿ ವೃತ್ತದಲ್ಲಿ ಸಮಾವೇಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಸತ್ಯಮೇವ ಜಯತೆ ಫಲಕ ಪ್ರದರ್ಶಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು. ಎಂ.ಕೆ.ಸೋಮಶೇಖರ್ ಸೇರಿದಂತೆ ಬೆಂಬಲಿಗರು ವೇಳೆ ಡೊಳ್ಳು ಕುಣಿತದ ತಾಳಕ್ಕೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಬಳಿಕ ಮಾತನಾಡಿದ ಎಂ.ಕೆ.ಸೋಮಶೇಖರ್, ಮುಡಾ ವಶಪಡಿಸಿಕೊಂಡ ಭೂಮಿಗೆ ಪರ್ಯಾಯವಾಗಿ ನಿವೇಶನ ನೀಡಿದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಎಳ್ಳಷ್ಟೂ ಇಲ್ಲ. ಇದು ಬಿಜೆಪಿ ನಾಯಕರೂ ಸೇರಿದಂತೆ ಎಲ್ಲರಿಗೂ ಗೊತ್ತಿದೆ. ಆದರೆ, ಕೇಂದ್ರ ಸರ್ಕಾರದ ಇಬ್ಬರು ಪ್ರಭಾವಿ ನಾಯಕರು ಸಿದ್ದರಾಮಯ್ಯ ವಿರುದ್ಧ ಸಂಚು ನಡೆಸಿದರು. ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ ಅವರನ್ನು ಹೇಗಾದರೂ ಮಾಡಿ ಮಣಿಸಬೇಕು ಎಂದು ಸಂಚು ನಡೆಸಿ, ಅವರ ವಿರುದ್ಧ ಇಡಿ ಹಾಗೂ ಇನ್ನಿತರ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಲು ಪದೇ ಪದೆ ಕುತಂತ್ರ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಪ್ರಕರಣದಲ್ಲಿ ನಿರ್ದೋಷಿ. ನಿವೇಶನ ಪಡೆದುಕೊಂಡಿರುವುದರಲ್ಲಿ ಸಿದ್ದರಾಮಯ್ಯ ಎಲ್ಲಿಯೂ ಹಸ್ತಕ್ಷೇಪ ಮಾಡಿಲ್ಲ. ಯಾವುದೇ ಶಿಫಾರಸು ಪತ್ರವನ್ನೂ ನೀಡಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ವಶಪಡಿಸಿಕೊಂಡ ಭೂಮಿಗೆ ಬದಲಿ ನಿವೇಶನ ನೀಡಲಾಗಿದೆ. ಕೇಂದ್ರದ ಇಬ್ಬರು ನಾಯಕರು ಲೂಟಿಕೋರರನ್ನು ಸತ್ಯಹರಿಶ್ಚಂದ್ರ ಎಂದು ಬಿಂಬಿಸಿ ಸತ್ಯಹರಿಶ್ಚಂದ್ರರಂತಹ ಸಿದ್ದರಾಮಯ್ಯ ಅವರ ವಿರುದ್ಧ ಸಂಚು ರೂಪಿಸಿ, ಅಪಪ್ರಚಾರ ಮಾಡುತ್ತ ಕುತಂತ್ರ ನಡೆಸುತ್ತಿದ್ದಾರೆ. ಇದೀಗ ಹೈಕೋರ್ಟ್ ನೀಡಿರುವ ತೀರ್ಪು ಸತ್ಯಕ್ಕೆ ಸಂದ ಜಯವಾಗಿದೆ. ಸತ್ಯ ಮೇವ ಜಯತೆ ಎಂಬುದು ತೀರ್ಪಿನಿಂದ ಬಹಿರಂಗವಾಗಿದೆ. ಜನತೆ ಬಿಜೆಪಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕು ಎಂದರು.
ಮಾಜಿ ಮೇಯರ್ ಪುಷ್ಪಲತಾ ಟಿ.ಬಿ.ಚಿಕ್ಕಣ್ಣ, ಮುಖಂಡರಾದ ಸೋಮಶೇಖರ್, ವಿಶ್ವ, ಮೈಸೂರು ಬಸವಣ್ಣ, ಡೇರಿ ವೆಂಕಟೇಶ್, ಗುಣಶೇಖರ್ ಇತರರಿದ್ದರು.