ಹಾವೇರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕುರಿತು ಅಲ್ಪಸಂಖ್ಯಾತರ ಪೂರ್ವಭಾವಿ ಸಭೆಯನ್ನು ಜು. 25ರಂದು ಬೆಳಗ್ಗೆ 11ಕ್ಕೆ ನಗರದ ಶಿವಶಕ್ತಿ ಪ್ಯಾಲೇಸ್‌ನಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ, ಅಮೃತ ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸೈಯದ್ ಅಜೀಮಪೀರ್ ಖಾದ್ರಿ ತಿಳಿಸಿದರು.
ನಗರದ ಪ್ರವಾಸಿಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಭೆಯಲ್ಲಿ ಮಾಜಿ ಸಚಿವರಾದ ಬಿ.ಝೆಡ್. ಜಮೀರಅಹ್ಮದ್ ಖಾನ್ ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ಅಲ್ಪಸಂಖ್ಯಾತ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಶಿಗ್ಗಾಂವಿ-ಸವಣೂರ ಕ್ಷೇತ್ರದಿಂದ ಆಗಸ್ಟ್ 3ರಂದು ದಾವಣಗೆರೆಯಲ್ಲಿ ಆಯೋಜಿಸಿರುವ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಕಾರ್ಯಕರ್ತರು, ಅಭಿಮಾನಿಗಳು ಪಾದಯಾತ್ರೆ ಮೂಲಕ ತೆರಳಲು ನಿರ್ಧರಿಸಿದ್ದಾರೆ. ಅದರಂತೆ ಜಿಲ್ಲೆಯಾದ್ಯಂತ ಶಾಸಕರು, ಮಾಜಿ ಸಚಿವರು, ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಸಭೆಗಳನ್ನು ಆಯೋಜಿಸಲಾಗಿದ್ದು, ಎಲ್ಲೆಡೆಯಿಂದಲೂ ಹೆಚ್ಚಿನ ಸಂಖ್ಯೆಯ ಜನರು ಅಮೃತ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಯ ಮಾಜಿ ಸಚಿವರು, ಶಾಸಕರು, ಜಿಲ್ಲಾಧ್ಯಕ್ಷರು ಸೇರಿ ಎಲ್ಲ ಮುಖಂಡರು ಈ ಕಾರ್ಯಕ್ರಮವನ್ನು ಐತಿಹಾಸಿಕ ಮಟ್ಟದಲ್ಲಿ ಯಶಸ್ವಿಗೊಳಿಸಲು ಸಿದ್ಧತೆ ನಡೆಸಿದ್ದಾರೆ ಎಂದರು.
ಅಮೃತ ಮಹೋತ್ಸವಕ್ಕೆ ಪಕ್ಷದಲ್ಲಿ ಯಾರು ವಿರೋಧ ಮಾಡಿಲ್ಲ. ಈ ಕಾರ್ಯಕ್ರಮ ಐತಿಹಾಸಿಕವಾಗಲಿರುವುದನ್ನು ಮನಗಂಡು ವಿಪಕ್ಷದವರಿಗೆ ಭಯ ಆರಂಭವಾಗಿದೆ. ಹೀಗಾಗಿ ದಿನಕ್ಕೊಂದು ಹೇಳಿಕೆ ನೀಡಲು ಆರಂಭಿಸಿದ್ದಾರೆ. ಸಿದ್ದರಾಮಯ್ಯ ಅವರು ಜನ ಸಾಮಾನ್ಯರ ನಾಯಕರಾಗಿದ್ದು, ಅವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲು ಜನರೇ ಸಜ್ಜಾಗಿದ್ದಾರೆ. ಈ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಮಹದಾಸೆಯು ಜನರದ್ದಾಗಿದೆ. ನಾಯಕರ ಜೊತೆಗೆ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿದ್ಧತೆ ನಡೆಸಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ನಗರಸಭೆ ಸದಸ್ಯರಾದ ಐ.ಯು. ಪಠಾಣ, ದಾದಾಫೀರ್ ಚೂಡಿಗಾರ, ಲಾಲ್ ಚೋಪದಾರ, ಎಪಿಎಂಸಿ ಮಾಜಿ ಅಧ್ಯಕ್ಷ ಪರಮೇಶಪ್ಪ ಎಣ್ಣಿ, ಸುಭಾನಿ ಚೂಡಿಗಾರ, ದಾಸಪ್ಪ ಕರ್ಜಗಿ, ಖಲೀಲ್ ಪಟವೇಗಾರ, ಡಾ. ಎಫ್.ಜಿ. ಪಾಟೀಲ, ಬಸವರಾಜ ಸಾಲಿ, ಸಲೀಂ ಫಾರೂಕಿ, ಶಂಭಣ್ಣ ನರ್ತಿ, ಖಲೀಲ್ ಖಾಜಿ ಇತರರಿದ್ದರು.
ಬಾಕ್ಸ್…
ಸಿದ್ದರಾಮಯ್ಯ ಅವರೇ ಸಿಎಂ ಆಗಲಿ…
ಪಕ್ಷದ ಹೈಕಮಾಂಡ್ ಹಾಗೂ ಶಾಸಕರು ಸಿಎಂ ಯಾರಾಗಬೇಕು ಎಂಬುದನ್ನು ತೀರ್ಮಾನಿಸುತ್ತಾರೆ. ನನ್ನ ವಯಕ್ತಿಕ ಅಭಿಪ್ರಾಯದಲ್ಲಿ ಸಿದ್ದರಾಮಯ್ಯ ಅವರೇ ಮುಂದಿನ ಸಿಎಂ ಆಗಬೇಕು. ಹಿಂದಿನ ಅವಧಿಯ 5ವರ್ಷದಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ ಹಾಗೂ ಜನರಪರ ಯೋಜನೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಕಟ್ಟಕಡೆಯ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಸರ್ಕಾರದ ಸೌಲಭ್ಯಗಳನ್ನು ಮುಟ್ಟಿಸಿದ್ದಾರೆ ಎಂದು ಖಾದ್ರಿ ತಿಳಿಸಿದರು.