

ಎಚ್.ಡಿ.ಕೋಟೆ: ಪಟ್ಟಣದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ಸ್ವರ್ಶ್ ಕುಷ್ಠ ರೋಗ ಅರಿವು ಆಂದೋಲನ ಜಾಥಾ ನಡೆಯಿತು.
ಜಾಥಾಗೆ ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಹಸಿರು ನಿಶಾನೆ ತೋರಿ ಮಾತನಾಡಿ, ಸ್ವರ್ಶ್ ಕುಷ್ಠರೋಗ ಅರಿವು ಆಂದೋಲನವನ್ನು ಜ. 30 ರಿಂದ ಫೆ. 13 ರವರೆಗೆ ಆಯೋಜಿಸಲಾಗಿದೆ. ರೋಗವನ್ನು ಬೇಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದು ಈ ಕಾರ್ಯಕ್ರಮದ ಉದ್ದೇಶ. ಕುಷ್ಠರೋಗವು ಮೈಕೋ ಬ್ಯಾಕ್ಟೀರಿಯಂ ಲೆಪ್ರೆ ಎಂಬ ರೋಗಾಣುವಿನಿಂದ ಉಂಟಾಗುತ್ತದೆ. ಪ್ರಾರಂಭಿಕ ಹಂತದಲ್ಲೇ ಕ್ರಮಬದ್ದ ಬಹುವಿಧ ಔಷಧ, ಚಿಕಿತ್ಸೆ ಪಡೆಯುವುದರಿಂದ ಸಂಪೂರ್ಣ ಗುಣಪಡಿಸಬಹುದು. ಅಂಗವಿಕಲತೆ ತಡೆಗಟ್ಟಬಹುದು ಎಂದು ತಿಳಿಸಿದರು.
ವೈದ್ಯಾಧಿಕಾರಿಗಳಾದ ಡಾ.ಆಶ್ರೀತ್ ಶೆಟ್ಟಿ, ಡಾ.ಕೀರ್ತಿ, ಡಾ.ಚಂದ್ರ ಕಲಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು ಇದ್ದರು.