

ಹಾಸನ: ಜಿಲ್ಲಾಧಿಕಾರಿ ನಿರ್ದೇಶನದಲ್ಲಿ ಎಲ್ಲಾ ಇಲಾಖೆಯ ಮುಖ್ಯಸ್ಥರು ಸ್ವಚ್ಛತಾ ಆಂದೋಲನವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ.ಎನ್. ಇನವಳ್ಳಿ ಅವರು ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಶುಕ್ರವಾರ ಸ್ವಚ್ಛತಾ ಆಂದೋಲನ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಎಲ್ಲಾ ಗ್ರಾಮಗಳಲ್ಲಿ ಸ್ವಚ್ಛತಾ ಆಂದೋಲನ ನಡೆಸುವಂತೆ ಕ್ರಮ ವಹಿಸಲು ಸೂಚಿಸಿದರು.
ನಗರಸಭೆ ವತಿಯಿಂದ ದಿನನಿತ್ಯ ತ್ಯಾಜ್ಯ ವಿಲೇವಾರಿ ವಾಹನಗಳಲ್ಲಿ ಸದರಿ ಆಂದೋಲನದ ಬಗ್ಗೆ ಮತ್ತು ಸ್ವಚ್ಛತೆ ಬಗ್ಗೆ ಪ್ರಚಾರ ನೀಡಬೇಕು. ಜನನಿಬಿಡ ಪ್ರದೇಶಗಳಲ್ಲಿ ಬೀದಿ ನಾಟಕದ ಮೂಲಕ ಸ್ವಚ್ಛತೆ ಕುರಿತು ಮಾರುಕಟ್ಟೆ, ಸಂತೆ , ಹಳೆ ಬಸ್ ನಿಲ್ದಾಣಗಳಲ್ಲಿ ಜಾಗೃತಿ ಮೂಡಿಸಬೇಕು. ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮಾಲಿನ್ಯ ನಿಯಂತ್ರಣದ ಕುರಿತು ಕರಪತ್ರ ವಿತರಣೆ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪತ್ರಿಕೆಗಳು ಹಾಗೂ ದೃಶ್ಯ ಮಾಧ್ಯಮಗಳ ಮೂಲಕ ಸದರಿ ಆಂದೋಲನದ ಕುರಿತು ಹೆಚ್ಚಿನ ಪ್ರಚಾರ ನೀಡಬೇಕು ಎಂದು ಹೇಳಿದರು.
ವಕೀಲರ ಸಂಘ ಈ ಆಂದೋಲನದಲ್ಲಿ ಪಾಲ್ಗೊಳ್ಳಬೇಕು ಹಾಗೂ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳನ್ನು ಸದರಿ ಆಂದೋಲನದಲ್ಲಿ ಪಾಲ್ಗೊಳ್ಳುವಂತೆ ಕ್ರಮವಹಿಸಬೇಕು. ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಕಾಲೇಜುಗಳಲ್ಲಿ ಕಡ್ಡಾಯವಾಗಿ ಗಾಂಧಿ ಜಯಂತಿಯನ್ನು ಆಚರಣೆ ಮಾಡಲಿದ್ದು, ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಸ್ವಚ್ಛತೆ ಕುರಿತಂತೆ ಮಕ್ಕಳಿಗೆ ತಿಳಿಸಬೇಕು ಎಂದರು.
ಭಾರತ್ ಸ್ಕೌಟ್ಸ್ ಆಂಡ್ ಗೈಡ್ಸ್ ಮಕ್ಕಳಿಂದ ಸ್ವಚ್ಛತೆ ಕುರಿತು ಜಾಗೃತಿ, ಸೈಕಲ್ ಜಾಥ, ಮ್ಯಾರಥಾನ್ ಅಂತಹ ಕ್ರಿಯಾಶೀಲ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಹಸಿರು ಭೂಮಿ ಪ್ರತಿಷ್ಠಾನದ ವತಿಯಿಂದ ತಮ್ಮ ಸಂಸ್ಥೆ ಚಟುವಟಿಕೆಗಳ ಮೂಲಕ ತ್ಯಾಜ್ಯ ವಿಂಗಡಣೆ, ತ್ಯಾಜ್ಯ ಮರುಬಳಕೆ ಹಾಗೂ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಲು ಸಹಕಾರ ನೀಡುವಂತೆ ತಿಳಿಸಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ಕೆ. ರವಿಕಾಂತ್, ಅಪರ ಜಿಲ್ಲಾಧಿಕಾರಿ ಕೆ. ಟಿ. ಶಾಂತಲಾ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ ಇತರರು ಇದ್ದರು.