

ಮೂಡಿಗೆರೆ: ಹ್ಯಾಂಡ್‌ಪೋಸ್ಟ್‌ನಿಂದ ಬೇಲೂರು ಮೂಲಕ ಬಾಣಾವರದವರೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ 1,700 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಎಸ್.ರಘು ತಿಳಿಸಿದ್ದಾರೆ.
ರಾಜ್ಯ ಹೆದ್ದಾರಿಯಾಗಿದ್ದ ಈ ರಸ್ತೆಯನ್ನು 2011ರಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲಾಗಿತ್ತು. ಹೆದ್ದಾರಿ ಅಗಲೀಕರಣ ನನೆಗುದಿಗೆ ಬಿದ್ದಿತ್ತು. ವಿವಿಧ ಹೆದ್ದಾರಿಗಳ ಅಗಲೀಕರಣಕ್ಕೆ ಜಿಲ್ಲಾ ಬಿಜೆಪಿಯಿಂದ ನಿರ್ಣಯ ಕೈಗೊಂಡು ಸಂಸದ ಕೋಟ ಶ್ರೀನಿವಾಸ ಪೂಜಾರಿ ಜತೆ ಚರ್ಚೆ ನಡೆಸಲಾಗಿತ್ತು. ಸಂಸದರ ಪ್ರಯತ್ನದಿಂದ ಅನುದಾನ ಬಿಡುಗಡೆಯಾಗಿದೆ. ಸದ್ಯದಲ್ಲೇ ಟೆಂಡರ್ ಪ್ರಕ್ರಿಯೆ ನಡೆದು ಕಾಮಗಾರಿ ಆರಂಭವಾಗಲಿದೆ. ಕಡೂರು-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ 410 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದ್ದು ಸರ್ವೇ ಮುಗಿದಿದೆ. ಗ್ರಾಮೀಣ ಭಾಗದಲ್ಲಿ 45 ಅಡಿ, ನಗರ ಪ್ರದೇಶದಲ್ಲಿ 35 ಅಡಿ ರಸ್ತೆ ವಿಸ್ತರಣೆಗೆ ಅಧಿಕಾರಿಗಳು ನೀಲಿನಕ್ಷೆ ತಯಾರಿಸಿದ್ದಾರೆ. ತುಮಕೂರು-ಮಂಗಳೂರು ಹೆದ್ದಾರಿ ಹ್ಯಾಂಡ್‌ಪೋಸ್ಟ್‌ನಿಂದ ಬಾಣಾವರದವರೆಗೆ ಎಷ್ಟು ಅಡಿ ಅಗಲೀಕರಣ ಎಂದು ಅಧಿಕಾರಿಗಳು ತೀರ್ಮಾನಿಸಬೇಕಿದೆ ಎಂದು ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಚಾರ್ಮಾಡಿ ಘಾಟ್ ಹೆದ್ದಾರಿ 13 ಕಿ.ಮೀ ಅಗಲೀಕರಣಕ್ಕೆ ಕೇಂದ್ರದಿಂದ ಅನುದಾನ ಬಿಡುಗಡೆಯಾಗಿದೆ. ಇನ್ನುಳಿದ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ 13 ಕಿ.ಮೀ. ಹೆದ್ದಾರಿ ಅಗಲೀಕರಣಕ್ಕೆ ಸದ್ಯದಲ್ಲೇ ಕೇಂದ್ರದಿಂದ ಅನುದಾನ ಬಿಡುಗಡೆಯಾಗಲಿದೆ. ಅದಕ್ಕಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಬಿಜೆಪಿಯ ಎಲ್ಲ ಜನಪ್ರತಿನಿಧಿಗಳೂ ಪ್ರಯತ್ನಿಸುತ್ತಿದ್ದಾರೆ. ಕೇಂದ್ರದಿಂದ ಅನುಮೋದನೆ ದೊರೆತ ಬಳಿಕ ಟೆಂಡರ್ ಪ್ರಕ್ರಿಯೆ ನಡೆದು ದ್ವಿಪಥದ ಘಾಟ್ ರಸ್ತೆ ನಿರ್ಮಾಣವಾಗಲಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯವಾಗಿದೆ. ಸರ್ಕಾರದ ಖಜಾನೆ ಖಾಲಿಯಾಗಿದೆ. ಗ್ಯಾರಂಟಿ ಯೋಜನೆಯಿಂದ ಚೇತರಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಜನರು ಸರ್ಕಾರದ ವಿರುದ್ಧ ತಿರುಗಿಬೀಳುವ ಮುನ್ನ ಎಚ್ಚೆತ್ತುಕೊಳ್ಳದಿದ್ದರೆ ಸರ್ಕಾರ ಪತನವಾಗುವುದು ನಿಶ್ಚಿತ ಎಂದು ಹೇಳಿದ್ದಾರೆ.