ಹೆದ್ದಾರಿ ಸಂಚಾರ ತಡೆದು ಆಕ್ರೋಶ

Published on

ಚಾಮರಾಜನಗರ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು, ಕಪ್ಪು ಬಾವುಟ ಪ್ರದರ್ಶಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಶುಕ್ರವಾರ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಲಾಯಿತು.
ನಗರದ ಸತ್ತಿ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆದು ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು.


ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಾರ್ವಜನಿಕರ ಕೆಲಸ ಕಾರ್ಯದ ಮೇಲೆ ಕೊಡುಗು ಜಿಲ್ಲಾ ಪ್ರವಾಸ ಕೈಗೊಂಡಿದ್ದ ವೇಳೆ ಅವರ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಕಪ್ಪುಬಾವುಟ ಪ್ರದರ್ಶಿಸಿರುವುದು ಖಂಡನೀಯ. ವಿರೋಧ ಪಕ್ಷದ ನಾಯಕರನ್ನು ಅಮಾನವೀಯವಾಗಿ ನಡೆಸಿಕೊಂಡಿರುವ ಬಿಜೆಪಿ ಕಾರ್ಯಕರ್ತರು ಇದಕ್ಕೆ ತಕ್ಕ ಬೆಲೆ ತೆರೆಯಬೇಕಾಗುತ್ತದೆ. ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದರೆ, ಮುಖ್ಯಮಂತ್ರಿ ಸೇರಿದಂತೆ ಬಿಜೆಪಿಯ ಯಾವ ಸಚಿವರು ರಸ್ತೆಯಲ್ಲಿ ಓಡಾಡಲು ಬಿಡುವುದಿಲ್ಲ. ಕೂಡಲೇ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬಿಜೆಪಿ, ಆರ್‌ಎಸ್‌ಎಸ್ ಕಾರ್ಯಕರ್ತರು ಒಂದು ಮೊಟ್ಟೆ, ಕಲ್ಲು ಎಸೆದರೆ ಅದಕ್ಕಾಗಿ ಪ್ರತಿಯಾಗಿ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಬಿಜೆಪಿ ನಾಯಕರ ಮೇಲೆ ಸಾವಿರ ಮೊಟ್ಟೆ ಎಸೆಯುವ ಚಳವಳಿಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆರೆಹಳ್ಳಿ ನವೀನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕಲವಾಡಿ ಗುರುಸ್ವಾಮಿ, ಮಹಮ್ಮದ್ ಅಸ್ಗರ್, ಕಾಂಗ್ರೆಸ್ ಎಸ್ಟಿ ವಿಭಾಗದ ರಾಜ್ಯ ಕಾರ್ಯದರ್ಶಿ ಪು.ಶ್ರೀನಿವಾಸನಾಯಕ, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎ.ಮಹದೇವಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಮಹದೇವು, ಮುಖಂಡ ಸೋಮಲಿಂಗಪ್ಪ, ಎಪಿಎಂಸಿ ನಿರ್ದೇಶಕ ಗುರುಸ್ವಾಮಿ, ನಗರಸಭೆ ಸದಸ್ಯೆ ಭಾಗ್ಯಮ್ಮ, ತಾ.ಪಂ ಮಾಜಿ ಸದಸ್ಯ ಮಹದೇವಶೆಟ್ಟಿ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net