ಹೈ ಮೆಟ್ಟಿಲೇರಿದ ಮುತ್ತಪ್ಪ ರೈ 2ನೇ ಪತ್ನಿ :  ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಎಫ್‌ಐಆರ್‌ಗೆ ತಡೆಗೆ ಮನವಿ

highcourt
Published on

ಬೆಂಗಳೂರು:  ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅನುರಾಧ ಪರ ಹೈಕೋರ್ಟ್ ವಕೀಲ ವೆಂಕಟೇಶ್ ಎಸ್.ಅರಬಟ್ಟಿ, ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರ ಏಕಸದಸ್ಯ ಪೀಠದ ಮುಂದೆ ಸೋಮವಾರ ತನಿಖೆಗೆ ಮಧ್ಯಂತರ ತಡೆ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಪೀಠವು ಪ್ರಕರಣದ ವಿವರಣೆ ನೀಡಿ ಎಂದು ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್.ಜಗದೀಶ್ ಅವರಿಗೆ ಸೂಚಿಸಿ ವಿಚಾರಣೆಯನ್ನು ಮಂಗಳವಾರಕ್ಕೆ (ಏ.22) ಮುಂದೂಡಿತು.

ಘಟನೆಗೂ ತನಗೂ ಯಾವುದೇ ಸಂಬಂಧವಿಲ್ಲ. ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಲು ಸಿದ್ಧವಿದ್ದೇನೆ. ಒಂದು ವೇಳೆ ಎಫ್‌ಐಆರ್‌ಗೆ ತಡೆ ನೀಡದಿದ್ದರೆ ತನಿಖೆಯ ನೆಪದಲ್ಲಿ ಕಿರುಕುಳ ಅನುಭವಿಸುವ ಸಾಧ್ಯತೆ ಇದೆ. ಹೀಗಾಗಿ,ಘಟನೆಗೆ ಸಂಬಂಧಿಸಿದಂತೆ ದಾಖಲಿಸಿರುವ ಎಫ್‌ಐಆರ್ ಹಾಗೂ ಈ ಕುರಿತಂತೆ ರಾಮನಗರ ವಿಚಾರಣಾ ನ್ಯಾಯಾಲಯದ ಮುಂದಿರುವ ಪ್ರಕರಣದ ವಿಚಾರಣೆಗೆ ತಡೆ ನೀಡಬೇಕು ಎಂದು ಕೋರಿದ್ದಾರೆ ಎಂದು ಅನುರಾಧಾ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net