ಹೈಕೋರ್ಟ್ ಮೆಟ್ಟಿಲೇರಿದ ಎಚ್‌ಡಿಕೆ:  ಬಲವಂತದ ಕ್ರಮ ಕೈಗೊಳ್ಳದಂತೆ ಹೈ ಸೂಚನೆ

highcourt
Published on

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ (ಎಸ್‌ಐಟಿ) ಎಂ.ಚಂದ್ರಶೇಖರ್ ದೂರು ಆಧರಿಸಿ ಬೆಂಗಳೂರಿನ ಸಂಜಯನಗರ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬುಧವಾರ ಹೈಕೋರ್ಟ್ ಕದತಟ್ಟಿದ್ದಾರೆ.

ವಿಚಾರಣೆ ನಡೆಸಿದ ನ್ಯಾಯಪೀಠ, ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಬೇಡವೆಂದು ಪೊಲೀಸರಿಗೆ ಸೂಚನೆ ನೀಡಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಮಾಧ್ಯಮಗೋಷ್ಠಿಯಲ್ಲಿ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡುವುದರ ಜತೆಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು ವಿರುದ್ಧ ಚಂದ್ರಶೇಖರ್ ದೂರು ನೀಡಿದ್ದರು. ಈಗ ಈ ಮೂವರು ನಾಯಕರು ಎಫ್‌ಐಆರ್ ರದ್ದತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಪ್ರಕರಣ ಸಂಬಂಧ ಪೊಲೀಸರು ಯಾವುದಾದರು ಕ್ರಮಕ್ಕೆ ಮುಂದಾದಲ್ಲಿ ತಕ್ಷಣ ನ್ಯಾಯಪೀಠದ ಕದ ತಟ್ಟಬಹುದು ಎಂದು ನ್ಯಾಯಪೀಠ ಹೇಳಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ರಾಜ್ಯದಲ್ಲಿ ಪ್ರಸ್ತುತ ಮುಖ್ಯಮಂತ್ರಿಗಳ ವಿರುದ್ಧ ತನಿಖೆಗೆ ಆದೇಶಿಸಿರುವುದರಿಂದ ನಮ್ಮ ಕಕ್ಷಿದಾರರಿಗೆ ಉದ್ದೇಶಪೂರ್ವಕವಾಗಿ ತೊಂದರೆ ನೀಡಲಾಗುತ್ತಿದೆ. ಕಳೆದ ಹತ್ತು ವರ್ಷಗಳ ಹಿಂದೆ ಮಂಜೂರಾಗಿರುವ ನಿರೀಕ್ಷಣಾ ಜಾಮೀನಿನ ರದ್ದು ಕೋರಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೀಠಕ್ಕೆ ತಿಳಿಸಿದರು.

ಜತೆಗೆ, ಸಂಜಯ್ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಠಾಣಾ ಮುಖ್ಯಸ್ಥರ ಮೂಲಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ತಲುಪಬೇಕು. ಆದರೆ, ಠಾಣಾ ಮುಖ್ಯಸ್ಥರ ಪಾತ್ರವಿಲ್ಲದೆ ದೂರುದಾರ ಅಧಿಕಾರಿಯೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಇದು ಕಾನೂನು ಪ್ರಕ್ರಿಯೆಯ ದುರ್ಬಳಕೆ ಎಂದು ವಾದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net