

ತೀರ್ಥಹಳ್ಳಿ: ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ಪ್ರಾಣ ಕಳೆದುಕೊಂಡವರ ಘಟನೆಗೆ ಸಂಬಂಧಿಸಿ ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಯತ್ನ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪಿಸಿದರು. ಮಂಗಳೂರಿಗೆ ಹೋಗುವ ಮಾರ್ಗದಲ್ಲಿ ಮಂಗಳವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇವಲ ಪ್ರತಿಷ್ಠೆಗಾಗಿ ಮಾಡಿದ ಕಾರ್ಯಕ್ರಮದಲ್ಲಿ 11 ಜನರು ಜೀವ ಕಳೆದುಕೊಳ್ಳುವುದಕ್ಕೆ ಸರ್ಕಾರದ ಬೇಜವಾಬ್ದಾರಿ ವರ್ತನೆಯೇ ಕಾರಣ. ಈ ಘಟನೆಗೂ ನನಗೂ ಸಂಬಂಧವಿಲ್ಲ ಎಂಬ ಮುಖ್ಯಮಂತ್ರಿಗಳ ಹೇಳಿಕೆ ಹೊಣೆಗೇಡಿತನದಿಂದ ಕೂಡಿದೆ ಎಂದು ಟೀಕಿಸಿದರು. ಟಿ-20 ವಿಶ್ವಕಪ್ ಗೆದ್ದ ಭಾರತ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸಕ್ಕೆ ಆಹ್ವಾನಿಸಿ ಆದರಿಸಿದರು. ಒಂದು ದೇಶ ಮತ್ತು ರಾಜ್ಯದ ಮುಖ್ಯಸ್ಥರಾಗಿ ಮಾಡಬೇಕಾದ ಮಾದರಿ ಕೆಲಸ ಅದು ಎಂದು ಹೇಳಿದರು.