

terror attack| ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಕುರಿತಂತೆ ಕನ್ನಡದ ಖ್ಯಾತ ನಟ ಶಿವರಾಜ್ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಈ ದಾಳಿ ಬಗ್ಗೆ ಚಿತ್ರರಂಗದ ಅನೇಕ ಗಣ್ಯರು ಹಾಗೂ ಸೆಲೆಬ್ರಿಟಿಗಳು ಪ್ರತಿಕ್ರಿಯಿಸಿದ್ದಾರೆ. ಇದೀಗ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಕೂಡ ಟ್ವೀಟ್ ಮಾಡುವ ಮೂಲಕ ದಾಳಿಯಲ್ಲಿ ಮೃತಪಟ್ಟವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.
ಪ್ರಾಣ ತೆಗೆಯುವ ಹಕ್ಕು ಯಾರಿಗೂ ಇಲ್ಲ. ಪಹಲ್ಗಾಮ್‌ನಲ್ಲಿ ನಡೆದ ಅಟ್ಯಾಕ್ ಕ್ಷಮಿಸಲಾರದ ಅಪರಾಧವಾಗಿದೆ. ಭಯೋತ್ಪಾದನೆ ಮಾಡುವ ಯಾರೇ ಆಗಿರಲಿ, ಅವರು ಬದುಕಲು ಅನರ್ಹ. ದಾಳಿಯಲ್ಲಿ ಮೃತರಾದವರಿಗೆ ನನ್ನ ಅಂತಿಮ ನಮನಗಳನ್ನು ಸಲ್ಲಿಸುತ್ತೇನೆ. ಮೃತರ ಕುಟುಂಬಸ್ಥರಿಗೆ ನಾನು ಸಾಂತ್ವನ ಹೇಳುತ್ತೇನೆ ಎಂದು ಖ್ಯಾತ ನಟ ಶಿವರಾಜ್ಕುಮಾರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ನಿನ್ನೆ (ಏಪ್ರಿಲ್ 22) ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಕ್ರೂರ ದಾಳಿ ನಡೆಸಿದ್ದಾರೆ. ಕಾಶ್ಮೀರದ ಸೌಂದರ್ಯವನ್ನು ನೋಡಲು ಬಂದಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದ್ದು, ಇಸ್ರೇಲ್ ಮತ್ತು ಇಟಲಿಯ ತಲಾ ಒಬ್ಬರು, ಇಬ್ಬರು ಸ್ಥಳೀಯರು, ಕರ್ನಾಟಕದ ಇಬ್ಬರು ಸೇರಿದಂತೆ ಒಟ್ಟು 29 ಜನರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಈ ದಾಳಿಯ ಹೊಣೆಯನ್ನು ಲಷ್ಕರ್ ಎ ತೊಯ್ದಾ ಉಗ್ರ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವ 'ದಿ 'ರೆಸಿಸ್ಪನ್ಸ್ ಫ್ರಂಟ್ ವಹಿಸಿಕೊಂಡಿದೆ.
(ಏಜೆನ್ಸೀಸ್)
2019 ರ ಪುಲ್ವಾಮಾ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ಇದಾಗಿದೆ ಎಂದು ಹೇಳಲಾಗಿದೆ. ಈ ಹತ್ಯೆಗಳು ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಮುಖ ನಗರಗಳಲ್ಲಿ ಭದ್ರತಾ ಎಚ್ಚರಿಕೆಗಳನ್ನು ಹೆಚ್ಚಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್ ಪಟ್ಟಣದಿಂದ 6 ಕಿ.ಮೀ ದೂರದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಬೈಸರನ್ ಕಣಿವೆಯ ಹುಲ್ಲುಗಾವಲಿನ ಪ್ರದೇಶವನ್ನು ವೀಕ್ಷಿಸುವಾಗ ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಪ್ರವಾಸಿಗರನ್ನು ಸುತ್ತುವರೆದ ಭಯೋತ್ಪಾದಕರು ಮನಬಂದಂತೆ ಗುಂಡು ಹಾರಿಸಿದರು. ಕೆಲವು ಭಯೋತ್ಪಾದಕರು, ಹೆಸರುಗಳನ್ನು ಕೇಳುತ್ತಾ ಮತ್ತು ಗುರುತಿನ ಚೀಟಿಗಳನ್ನು ನೋಡುತ್ತಾ, ಹಿಂದೂಗಳನ್ನು ಗುಂಡು ಹಾರಿಸಿ ಕೊಂದರು. ವಿಶೇಷವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡಂತೆ ತೋರುತ್ತದೆ. ಇಡೀ ಜಗತ್ತು ಈ ಘಟನೆಯನ್ನು ಖಂಡಿಸುತ್ತಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಭಯೋತ್ಪಾದಕರನ್ನು ನಿರ್ಮೂಲನೆ ಮಾಡದೇ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.