ಖಾನಾಪುರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದೆ. ಜನರು ಐದಾರು ಬಾರಿ ವಿಶ್ವಾಸವಿಟ್ಟು ಸೇವೆ ಸಲ್ಲಿಸಲು ನನಗೆ ಅವಕಾಶ ಕಲ್ಪಿಸಿದ್ದಾರೆ. ಈ ಬಾರಿಯೂ ಬಿಜೆಪಿ ಗೆಲುವು ಖಚಿತವಾಗಿದ್ದು, ಕಾಂಗ್ರೆಸ್ ಸಮರ್ಥ ಅಭ್ಯರ್ಥಿ ಇಲ್ಲದೆ ಅಭ್ಯರ್ಥಿಗಳ ಹುಡುಕಾಟ ನಡೆಸುತ್ತಿದೆ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಆರೋಗ್ಯದ ಕಾರಣದಿಂದ ಈ ಬಾರಿ ಚುನಾವಣೆಯಿಂದ ದೂರ ಉಳಿಯಲು ಯೋಚಿಸಿದ್ದೇನೆ. ಅದನ್ನು ವರಿಷ್ಠರಿಗೂ ತಿಳಿಸಿದ್ದೇನೆ. ಆದರೆ ಚುನಾವಣೆಗೆ ಸಜ್ಜಾಗುವಂತೆ ಪಕ್ಷದ ಮುಖಂಡರು ಆದೇಶಿಸಿದ್ದಾರೆ.
ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಕೇಂದ್ರದಲ್ಲಿ ಮೂರನೇ ಬಾರಿಗೆ ಬಿಜೆಪಿ ಸರ್ಕಾರ ತರಲು ಪ್ರಯತ್ನ ಮಾಡುತ್ತೇವೆ. ಯಾರೇ ಅಭ್ಯರ್ಥಿಯಾದರೂ ಪಕ್ಷವನ್ನು ಗೆಲ್ಲಿಸುವುದೇ ನಮ್ಮ ಗುರಿ ಎಂದರು.
ತಾಲೂಕಿನ ಅಭಿವೃದ್ಧಿ ವಿಷಯದಲ್ಲಿ ಸಂಸದರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದರು. ಶಾಸಕ ವಿಠ್ಠಲ ಹಲಗೇಕರ, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಸುಭಾಷಗೌಡ ಪಾಟೀಲ, ತಾಲೂಕಾಧ್ಯಕ್ಷ ಸಂಜಯ ಕುಬಲ, ಜಿಲ್ಲಾ ಉಪಾಧ್ಯಕ್ಷ ಪ್ರಮೋದ ಕೋಚೇರಿ, ವಿಜಯ ಕಾಮತ, ಸುಭಾಷ ಗುಹಶೆಟ್ಟಿ, ಸುನೀಲ ಮಡ್ಡಿಮನಿ, ಶ್ರೀಕಾಂತ ಇಟಗಿ, ಜ್ಯೋತಿಬಾ ರೇಮಾನಿ, ಬಸವರಾಜ ಸಾಣಿಕೊಪ್ಪ ಇತರರು ಇದ್ದರು.