

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದಲ್ಲಿ ನಕಲಿ ವೋಟರ್ ಐಡಿ ಪತ್ತೆ ಪ್ರಕರಣ ಸಂಬಂಧ ದಾಖಲಾಗಿರುವ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮಾಜಿ ಶಾಸಕ ಮುನಿರತ್ನಗೆ ನೋಟಿಸ್ ಜಾರಿ ಮಾಡಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಜಾಲಹಳ್ಳಿಯ ಅಪಾರ್ಟ್ವೆುಂಟ್ನಲ್ಲಿ ಪತ್ತೆಯಾದ ನಕಲಿ ವೋಟರ್ ಐಡಿ ಪ್ರಕರಣದಲ್ಲಿ ಪೊಲೀಸರು ಸರಿಯಾದ ತನಿಖೆ ನಡೆಸಲಿಲ್ಲ. ಈ ಪ್ರಕರಣವನ್ನು ಸಿಬಿಐಗೆ ವಹಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆನಂದ್ಕುಮಾರ್ ಮತ್ತು ಸಂತೋಷ್ಕುಮಾರ್ ಪಿಐಎಲ್ ಸಲ್ಲಿಸಿದ್ದಾರೆ. ಮಂಗಳವಾರ ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ನಗರ ಪೊಲೀಸ್ ಆಯುಕ್ತರು, ಜಾಲಹಳ್ಳಿ ಇನ್ಸ್ಪೆಕ್ಟರ್, ಮುನಿರತ್ನ ಹಾಗೂ ಸಿಬಿಐಗೆ ನೋಟಿಸ್ ಜಾರಿ ಮಾಡಲು ಆದೇಶಿಸಿ ಜೂ.2ಕ್ಕೆ ವಿಚಾರಣೆ ಮುಂದೂಡಿತು.