More

    ರಾಜಕಾಲುವೆ ಒತ್ತುವರಿ ತೆರವಿಗೆ ಖಡಕ್ ಸೂಚನೆ

    ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಲು ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

    ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಬೆಂಗಳೂರು ನಗರ ಜಿಲ್ಲಾಧಿಕಾರಿ ಸಮ್ಮುಖ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರಿಗೆ ತಹಶೀಲ್ದಾರ್ ಅವರಿಂದ ಆದೇಶ ನೀಡೀರುವಂತಹ ಒತ್ತುವರಿಗಳನ್ನು ಕೂಡಲೇ ತೆರವುಗೊಳಿಸಬೇಕು. ಆದೇಶಗಳನ್ನು ನೀಡದಿರುವ ಒತ್ತುವರಿಗಳಿಗೆ ಕೂಡಲೇ ಆದೇಶಗಳನ್ನು ನೀಡಿ ಒತ್ತುವರಿಗಳ ತೆರವು ಕಾರ್ಯಾಚರಣೆ ನಡೆಸಬೇಕು ಎಂದು ಸೂಚಿಸಿದರು.

    ಭೂಮಾಪನ ಕಾರ್ಯ ಮಾಡಿರುವ ಕಡೆ ಗ್ರಾಮ ನಕ್ಷೆ ಮತ್ತು ಟಿಪ್ಪಣಿಗಳ ಅನ್ವಯ ಯಾವುದೇ ವ್ಯತ್ಯಾಸ ಮಾಡದೆ ಸಂಬಂಧಪಟ್ಟ ಭೂಮಾಪಕರು ನಕ್ಷೆಯನ್ನು ಸಿದ್ಧಪಡಿಸಿ ತಹಶೀಲ್ದಾರ್ ಅದಕ್ಕೆ ಆದೇಶಗಳನ್ನು ಜಾರಿಮಾಡಬೇಕು. ಒತ್ತುವರಿ ತೆರವುಗೊಳಿಸಿ ಸಮರ್ಪಕ ಕಾಲುವೆಯನ್ನು ನಿರ್ಮಾಣ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜತೆಗೆ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ನಿಗದಿತ ಸಮಯದಲ್ಲಿ ಇತ್ಯರ್ಥಪಡಿಸಿಕೊಂಡು ಒತ್ತುವರಿ ತೆರವು ಮಾಡುವಂತೆ ನಿರ್ದೇಶಿಸಿದರು.

    ಕೋರ್ಟ್‌ಗೆ ನೀಡಿರುವ ಮಾಹಿತಿಯಂತೆ ಕ್ರಮ:

    ನಗರದಲ್ಲಿ ಬೃಹತ್ ನೀರುಗಾಲುವೆ ಒತ್ತುವರಿ ಹಾಗೂ ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಪಾಲಿಕೆಯಿಂದ ವರದಿಯನ್ನು ನೀಡಲಾಗಿದೆ. ಅದರಂತೆ, ಪಾಲಿಕೆ ವ್ಯಾಪ್ತಿಯಲ್ಲಿ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರಂತೆ, ನಗರದಲ್ಲಿ ಹೊಸ ಒತ್ತುವರಿ ಸೇರಿದಂತೆ 3,147 ಒತ್ತುವರಿಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ 2,247 ಒತ್ತುವರಿ ತೆರವುಗೊಳಿಸಿದ್ದು, ಇನ್ನೂ 900 ತೆರವು ಬಾಕಿ ಇದೆ. ಈ ಪೈಕಿ 130 ಒತ್ತುವರಿ ಪ್ರಕರಣಗಳು ನ್ಯಾಯಾಲಯದಲ್ಲಿದ್ದು, 401 ಆದೇಶಗಳನ್ನು ಜಾರಿಗೊಳಿಸುವ ಹಂತದಲ್ಲಿದೆ. ಇನ್ನು 370 ಒತ್ತುವರಿಗಳಿಗೆ ತಹಶಿಲ್ದಾರಿಂದ ಆದೇಶಗಳನ್ನು ಜಾರಿಗೊಳಿಸಲಾಗಿದ್ದು, ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಬೇಕಿದೆ ಎಂದು ರಾಜಕಾಲುವೆ ವಿಭಾಗದ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

    ಸಭೆಯಲ್ಲಿ ನಗರ ಜಿಲ್ಲಾಧಿಕಾರಿ ಬಿ.ಎ. ದಯಾನಂದ್, ಬಿಬಿಎಂಪಿ ವಿಶೇಷ ಆಯುಕ್ತ ಡಾ. ಕೆ. ಹರೀಶ್‌ಕುಮಾರ್, ಇಂಜಿನಿಯರಿಂಗ್ ವಿಭಾಗದ ಪ್ರಧಾನ ಅಭಿಯಂತರ ಪ್ರಹ್ಲಾದ್, ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ರಾಜಕಾಲುವೆ ವಿಭಾಗಕ್ಕೆ ಸಂಬಂಧಿಸಿದ ಅಧಿಕಾರಿಗಳು, ನಗರ ಜಿಲ್ಲೆಯ ತಹಶೀಲ್ದಾರ್‌ಗಳು ಉಪಸ್ಥಿತರಿದ್ದರು.

    ಕೆರೆ ಒತ್ತುವರಿ ಗುರುತಿಸಿ ಸಮೀಕ್ಷೆ ನಡೆಸಿ:

    ಬಿಬಿಎಂಪಿ ವ್ಯಾಪ್ತಿಯಲ್ಲಿ 202 ಕೆರೆಗಳಿದ್ದು, 159 ಕೆರೆಗಳಲ್ಲಿ ಒತ್ತುವರಿ ಇದೆ. ಹೈಕೋರ್ಟ್‌ಗೆ ಸಲ್ಲಿಸಿರುವ ಕ್ರಿಯಾ ಯೋಜನೆ ಪ್ರಕಾರ ಕ್ರಮವಹಿಸಲು ತಹಶೀಲ್ದಾರರಿಗೆ ಪತ್ರಗಳನ್ನು ಬರೆಯಲಾಗಿದೆ. ಈ ಪೈಕಿ ಪಾಲಿಕೆ ವ್ಯಾಪ್ತಿಯಲ್ಲಿ 130 ಕೆರೆಗಳ ಸರ್ವೇ ಮಾಡಲು ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಕೇಳಲಾಗಿದೆ. ಅದರಂತೆ ಇದುವೆರೆಗೆ 20 ಕೆರೆಗಳಲ್ಲಿ ಸಮೀಕ್ಷೆ ನಡೆಸಿದ್ದು, ಉಳಿದೆಡೆ ಒತ್ತುವರಿ ಸಮೀಕ್ಷೆ ಕಾರ್ಯವನ್ನು ತ್ವರಿತವಾಗಿ ನಡೆಸಲು ಸೂಚಿಸಲಾಗಿದೆ.

    ತ್ವರಿತಗತಿಯಲ್ಲಿ ರಸ್ತೆಗುಂಡಿ ಮುಚ್ಚಿ:

    ನಗರದ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಉಂಟಾಗಿರುವ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ವಾರ್ಡ್‌ಗಳಲ್ಲಿ ಹಂತ-ಹಂತವಾಗಿ ರಸ್ತೆಗುಂಡಿಗಳನ್ನು ಮುಚ್ಚಲು ವಲಯ ಮುಖ್ಯ ಅಭಿಯಂತರರಿಗೆ ತುಷಾರ್ ಗಿರಿನಾಥ್ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts