More

    ಮಹಿಳೆಯರ ಸಬಲೀಕರಣಕ್ಕೆ ನರೇಗಾ ಸಹಕಾರಿ

    ನರಗುಂದ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಕೆಲಸ ಮಾಡುವ ಹಕ್ಕನ್ನು ಪ್ರತಿಪಾದಿಸುತ್ತದೆ. ಮಹಿಳೆಯರು ತಮ್ಮ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗವನ್ನು ಕೇಳಿ ಪಡೆಯಬೇಕು ಎಂದು ಜಿಪಂ ಸಹಾಯಕ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಕಿರಣ ಎಸ್.ಎಚ್. ಹೇಳಿದರು.

    ತಾಲೂಕಿನ ಹದಲಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಹಿಳಾ ಸ್ನೇಹಿ ಉದ್ಯೋಗ ಖಾತ್ರಿ ಯೋಜನೆಯ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.

    ಪ್ರತಿ ಕುಟುಂಬಕ್ಕೆ ಕನಿಷ್ಠ 100 ದಿನಗಳ ಕೂಲಿ ಒದಗಿಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಜೀವನೋಪಾಯದ ಭದ್ರತೆಯನ್ನು ಖಚಿತಪಡಿಸುತ್ತದೆ. ಕೌಶಲರಹಿತ ಕೆಲಸ ಮಾಡಲು ಮಹಿಳೆಯರು ಸ್ವಯಂ ಪ್ರೇರಣೆಯಿಂದ ಮುಂದೆ ಬರಬೇಕು ಎಂದರು.

    ಪ್ರತಿಯೊಬ್ಬರಿಗೂ 316 ರೂ. ಕೂಲಿ ಪಾವತಿಸಲಾಗುತ್ತದೆ. ಪ್ರತಿ ಎನ್‌ಎಂಆರ್‌ನಲ್ಲಿ ಶೇ.60ರಷ್ಟು ಮಹಿಳೆಯರು ಕಡ್ಡಾಯವಾಗಿ ಇರುವಂತೆ ಕ್ರಮ ವಹಿಸಲಾಗುತ್ತಿದೆ. ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಈ ಯೋಜನೆ ಜಾರಿಗೆ ತಂದಿದ್ದು, ಇದರ ಲಾಭ ಪಡೆದುಕೊಳ್ಳುವುದು ಪ್ರತಿಯೊಬ್ಬರ ಹಕ್ಕಾಗಿದೆ. ಜಿಲ್ಲೆಯಲ್ಲಿ ಶೇ. 60ರಷ್ಟು ಮಹಿಳೆಯರು ಉದ್ಯೋಗ ಖಾತ್ರಿಯಲ್ಲಿ ಕೆಲಸ ನಿರ್ವಹಿಸುವಂತೆ ನೋಡಿಕೊಳ್ಳಲು ಯೋಜನೆ ರೂಪಿಸಲಾಗಿದ್ದು, ಈ ಕಾರ್ಯಕ್ಕೆ ಎಲ್ಲ ಹಂತದ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

    ನರಗುಂದ ತಾಲೂಕು ಪಂಚಾಯಿತಿ ಐಇಸಿ ಸಂಯೋಜಕ ಸುರೇಶ ಬಾಳಿಕಾಯಿ ಮಾತನಾಡಿ, ಮುಂಗಾರು ಮಳೆ ಕೈಕೊಟ್ಟು ಕೈಗೆ ಕೆಲಸ ಇಲ್ಲ ಎಂಬ ಕೊರಗು ಯಾರಿಗೂ ಬೇಡ. ನರೇಗಾ ಯೋಜನೆಯಡಿ ನಿರಂತರವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲಸ ಕೊಡಲಾಗುತ್ತಿದೆ. ಯೋಜನೆಯಡಿ ಕೆಲಸ ಪಡೆದು ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಸಬಲೀಕರಣವಾಗಬೇಕು ಎಂದು ತಿಳಿಸಿದರು.

    ನರೇಗಾ ತಾಂತ್ರಿಕ ಸಂಯೋಜಕ ಹನಮಂತ ಡಂಬಳ ಮಾತನಾಡಿ, ಉದ್ಯೋಗ ಖಾತ್ರಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣ ಹೆಚ್ಚಿಸಲು ಎಲ್ಲ ವೈಯಕ್ತಿಕ ಹಾಗೂ ಇತರ ಕಾಮಗಾರಿಗಳ ಎನ್‌ಎಂಆರ್‌ಗಳನ್ನು ಮಹಿಳೆಯರ ಹೆಸರಿನಲ್ಲಿ ಸೃಜನೆ ಮಾಡಲಾಗುವುದು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts