ಪಿರಿಯಾಪಟ್ಟಣ: ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಮಾನಸಿಕ ಸದೃಢತೆಗೆ ಎನ್‌ಎನ್‌ಎಸ್‌ಎಸ್ ಶಿಬಿರಗಳು ಸಹಕಾರಿಯಾಗಲಿವೆ ಎಂದು ಮೈಸೂರಿನ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ತಿಳಿಸಿದರು.
ಪಟ್ಟಣದ ಆದಿಚುಂಚನಗಿರಿ ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ತಾಲೂಕಿನ ಹಮ್ಮಿಗೆ ಗ್ರಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಯುವಕರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಯುವ ಪೀಳಿಗೆಯನ್ನು ಜಾಗೃತಗೊಳಿಸಲು ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಸೇವಾ ಯೋಜನೆಯನ್ನು ಆರಂಭಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ರಾಷ್ಟ್ರೀಯ ಸೇವಾ ಯೋಜನೆಯ ಧ್ಯೇಯೋದ್ದೇಶಗಳನ್ನು ಇಂದು ವಿದ್ಯಾರ್ಥಿಗಳು ಸಾರ್ಥಕಗೊಳಿಸುತ್ತಿದ್ದಾರೆ ಎಂದರು.
ಈ ಶಿಬಿರಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ವಿಚಾರಧಾರೆಗಳು ವಿದ್ಯಾರ್ಥಿಗಳಿಗೆ ತಲುಪುತ್ತಿದ್ದು, ಇದನ್ನು ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕು. ಗ್ರಾಮದಲ್ಲಿ ಶಿಬಿರ ಯಶಸ್ವಿಯಾಗಲು ಗ್ರಾಮಸ್ಥರು ಸಾಕಷ್ಟು ಸಹಕಾರ ನೀಡಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.
ತಾಲೂಕು ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಮಾತನಾಡಿ ವಿದ್ಯಾರ್ಥಿಗಳಿಗೆ ಎನ್‌ಎಸ್‌ಎಸ್ ಶಿಬಿರಗಳಲ್ಲಿ ನೀಡುವ ಮಾರ್ಗದರ್ಶನವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯುವ ಪೀಳಿಗೆಗೆ ಈ ಸಮಾಜವನ್ನು ಉತ್ತಮ ದಿಕ್ಕಿನೆಡೆಗೆ ಕೊಂಡೊಯ್ಯುವ ಶಕ್ತಿಯಿದ್ದು, ಶಿಬಿರದ ಉದ್ದೇಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಬಿಜೆಪಿ ಮುಖಂಡ ಪಿ.ಪ್ರಶಾಂತ್ ಗೌಡ ಮತ್ತು ಉದ್ಯಮಿ ಬಿ.ಎಸ್.ರಾಮಚಂದ್ರ ಮಾತನಾಡಿದರು. ಚಿಟ್ಟೆನಹಳ್ಳಿ ಗ್ರಾಪಂ ಅಧ್ಯಕ್ಷೆ ರೂಪಾ, ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಸುಧಾಕರ್, ಪ್ರಾಂಶುಪಾಲ ಪ್ರವೀಣ್, ಎನ್‌ಎಸ್‌ಎಸ್ ಅಧಿಕಾರಿ ಮಹದೇವ್, ಗ್ರಾಮದ ಮುಖಂಡರಾದ ಶಿವಣ್ಣಗೌಡ, ಸ್ವಾಮೇಗೌಡ, ಬಸವರಾಜ್, ವಾಸು, ರಾಜೇಗೌಡ, ಸದಾಶಿವು, ಹೊನ್ನೇಗೌಡ, ಸಾಗರ್, ಮಹೇಶ್, ಗಿರೀಶ್, ಪ್ರಕಾಶ ಇತರರು ಇದ್ದರು.