More

    ಸುವರ್ಣ ವಿಧಾನಸೌಧಕ್ಕೆ ಕಚೇರಿ ಸ್ಥಳಾಂತರ ಸಂಬಂಧ 7 ರಂದುತೀರ್ಮಾನ

    ಬೆಳಗಾವಿ: ಸುವರ್ಣ ವಿಧಾನಸೌಧಕ್ಕೆ ಕಚೇರಿ ಸ್ಥಳಾಂತರ ಸಂಬಂಧ ಬೆಂಗಳೂರಿನಲ್ಲಿ ಮಂಗಳವಾರ ನಡೆಯಲಿರುವ ಉನ್ನತಮಟ್ಟದ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ (ಆರ್‌ಡಿಪಿಆರ್) ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

    ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಜನರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಆರ್‌ಡಿಪಿಆರ್ ಇಲಾಖೆ ಕಚೇರಿಯನ್ನು ಸೌಧಕ್ಕೆ ಸ್ಥಳಾಂತರಿಸಲು ಚಿಂತನೆ ನಡೆಸಿದ್ದೇವೆ. ಇದಕ್ಕಾಗಿ ಅಗತ್ಯವಿರುವ ಕೊಠಡಿಗಳನ್ನು ಸೌಧದಲ್ಲಿ ನೀಡುವಂತೆ ಸಭಾಧ್ಯಕ್ಷರಿಗೆ ಕೋರಿದ್ದೇವೆ ಎಂದು ತಿಳಿಸಿದರು.

    ನಾಡದ್ರೋಹಿಗಳಿಗೆ ತಕ್ಕ ಶಾಸ್ತಿ: ಗಡಿ, ಭಾಷೆ ಹಾಗೂ ಜಲ ವಿವಾದವನ್ನು ಕೆಲವರು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಈ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ನಾಡದ್ರೋಹ ಕೆಲಸಗಳು ಅಲ್ಲಲ್ಲಿ ಕಂಡುಬರುತ್ತಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಈ ವಿಷಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿವೆ ಎಂದು ಹೇಳಿದರು.

    ತಮಗೆ ಜೀವ ಬೆದರಿಕೆ ಕರೆ ಬಂದಿರುವ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನೆರೆಯ ಮೂರು ದೇಶಗಳ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡುವುದೇ ಪೌರತ್ವ ಕಾಯ್ದೆ ತಿದ್ದುಪಡಿ ಉದ್ದೇಶವಾಗಿದೆ. ಯಾವುದೇ ದೇಶದಿಂದ ಜೀವ ಬೆದರಿಕೆ ಬಂದರೂ ಹೆದರುವುದಿಲ್ಲ.

    ಈಗಾಗಲೇ ಶಿವಮೊಗ್ಗ ಎಸ್‌ಪಿಗೆ ದೂರು ನೀಡಿದ್ದೇನೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಗಮನಕ್ಕೂ ತಂದಿದ್ದೇನೆ. ಪೊಲೀಸರು ತನಿಖೆ ಕೈಗೊಂಡು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತಾರೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts