More

    ಮೀನುಗಾರಿಕೆ ನಡೆಸಲು ಟೆಂಡರ್ ಮಾಡಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ ಸೂಚನೆ

    ಮಂಡ್ಯ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೇರಿದ ಕೆರೆಗಳಲ್ಲಿ ಮೀನುಗಾರಿಕೆ ನಡೆಸಲು ಇ-ಹರಾಜು ಮಾಡುವುದು ಉತ್ತಮ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ ಸೂಚನೆ ನೀಡಿದರು.
    ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೀನುಗಾರಿಗೆ ಇಲಾಖೆಯಲ್ಲಿ ತಾಲೂಕುವಾರು ವ್ಯಾಪ್ತಿಯಲ್ಲಿ ಬರುವ ಎಲ್ಲ ಕೆರೆಗಳನ್ನು ಒಟ್ಟಿಗೆ ಸೇರಿಸಿ ಹರಾಜು ಮಾಡುವುದರಿಂದ ವಹಿವಾಟು ಹೆಚ್ಚಾಗಿ ನಡೆಯುತ್ತದೆ. ಮಾತ್ರವಲ್ಲದೆ ಬೇಡಿಕೆ ಸಹ ಹೆಚ್ಚುತ್ತದೆ. ಆದ್ದರಿಂದ ಕೆರೆಗಳನ್ನು ಇ-ಹರಾಜು ಮಾಡುವ ಮೂಲಕ ಹೆಚ್ಚಿನ ಆದಾಯ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಕ್ರಮ ವಹಿಸುವಂತೆ ತಿಳಿಸಿದರು.
    ಇನ್ನು ಮಾರ್ಚ್ ಒಳಗೆ ಇಲಾಖೆಗಳು ತಮಗೆ ನೀಡಲಾಗಿರುವ ಗುರಿಯನ್ನು ಶೇ.100ರಷ್ಟು ಸಾಧನೆ ಮಾಡಬೇಕು. ಜತೆಗೆ ಮುಂದಿನ ಸಾಲಿಗೆ ಇಲಾಖೆಗೆ ಅವಶ್ಯಕತೆ ಇರುವ ಹೊಸ ಯೋಜನೆಗಳ ಬಗ್ಗೆ ಗಮನಹರಿಸಬೇಕು. ಅಂತೆಯೇ ಮಧುಮೇಹ ಹಾಗೂ ರಕ್ತದೊತ್ತಡ ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದ್ದರಿಂದ ಸಾರ್ವಜನಿಕರನ್ನು ಪರೀಕ್ಷೆಗೆ ಒಳಪಡಬೇಕು. ಮಾತ್ರವಲ್ಲದೆ ಆಹಾರ ಪದ್ಧತಿ ಹಾಗೂ ಜೀವನಶೈಲಿ ಬದಲಾವಣೆಯಾಗಬೇಕು. ಇದರ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಮನೆ ಮನೆಗೆ ಭೇಟಿ ನೀಡಿ ಜನರನ್ನು ಪರೀಕ್ಷೆಗೆ ಒಳಪಡಿಸಿ ರೋಗಿಗಳನ್ನು ಪತ್ತೆ ಹಚ್ಚಿ ಅವರಿಗೆ ಔಷಧವನ್ನು ತಲುಪಿಸಿ ನಿಯಂತ್ರಿಸಬೇಕು. ಇದರಿಂದ ಹೃದಯ, ನರ, ಮೂತ್ರಪಿಂಡಕ್ಕೆ ಸಂಬಂಧಿಸಿದ ರೋಗಗಳನ್ನು ನಿಯಂತ್ರಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.
    ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಮಾತನಾಡಿ, ಆಯುಷ್ಮಾನ್ ಆರೋಗ್ಯ ಕಾರ್ಡ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ನೋಂದಣಿ ಮಾಡಲು ಗ್ರಾಮ ಒನ್ ಕೇಂದ್ರದ ಸಿಬ್ಬಂದಿಯನ್ನು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಸರ್ಕಾರಿ ಕಾರ್ಯಕ್ರಮಗಳಿಗೆ ನಿಯೋಜಿಸಬೇಕು. ಈ ಮೂಲಕ ಸಾರ್ವಜನಿಕರಿಗೆ ಸ್ಥಳದಲ್ಲೇ ಆಯುಷ್ಮಾನ್ ಆರೋಗ್ಯ ಯೋಜನೆಗೆ ನೋಂದಣಿ ಮಾಡಿಕೊಳ್ಳಬೇಕು. ಈ ಮೂಲಕ ಉತ್ತಮ ಸಾಧನೆ ಮಾಡುವಂತೆ ಸೂಚನೆ ನೀಡಿದರು.
    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಎನ್.ಧನಂಜಯ ಮಾತನಾಡಿ, ಮುಂದಿನ ಆರ್ಥಿಕ ಸಾಲಿನಲ್ಲಿ 15ನೇ ಹಣಕಾಸು ಯೋಜನೆಯಡಿ ಆಶಾ ಕಾರ್ಯಕರ್ತೆಯರಿಗೆ ಟ್ಯಾಬ್ ಖರೀದಿಸಿ ನೀಡಲು ಯೋಜನೆ ರೂಪಿಸಲಾಗುತ್ತಿದೆ. ಮನೆ ಮನೆ ಭೇಟಿ ನೀಡಿದಾಗ ಟ್ಯಾಬ್ ಮೂಲಕ ವೈದ್ಯರ ಸಲಹೆ ಆನ್‌ಲೈನ್ ಮೂಲಕ ನೀಡಿದರೆ ಚಿಕಿತ್ಸೆಯಲ್ಲಿ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ಸಲಹೆ ನೀಡಿದರು.
    ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಮಾತನಾಡಿ, ಮನರೇಗಾ ಯೋಜನೆಯಡಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಸಾಗಬೇಕು. ಇದರೊಂದಿಗೆ ಈಗಾಗಲೇ ನೀಡಲಾಗಿರುವ ಗುರಿ ಸಾಧಿಸಬೇಕು. ಜಿಲ್ಲೆಯಲ್ಲಿ ಮನರೇಗಾ ಯೋಜನೆಯಡಿ 1,155 ಶಾಲೆಗಳಲ್ಲಿ ಆಟದ ಮೈದಾನಗಳನ್ನು ನಿರ್ಮಾಣ ಮಾಡಲು ಯೋಜಿಸಲಾಗಿದೆ. ಇದರಲ್ಲಿ 116 ಪೂರ್ಣಗೊಂಡಿದ್ದು, 363 ಪ್ರಗತಿಯಲ್ಲಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಉಳಿದ ಕಾಮಗಾರಿಗಳು ಪ್ರಾರಂಭವಾಗುವಂತೆ ಗಮನಹರಿಸಬೇಕು ಎಂದು ಸೂಚನೆ ನೀಡಿದರು.
    ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಸಂಜೀವಪ್ಪ, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಜಯವಿಭವಸ್ವಾಮಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts