16ರಂದು ಜಮ್ಮು & ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪದಗ್ರಹಣ | Omar Abdullah

Untitled-design-30
Published on

ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ (NC) ನಾಯಕ ಒಮರ್ ಅಬ್ದುಲ್ಲಾ(Omar Abdullah) ಅವರು ಅಕ್ಟೋಬರ್ 16ರಂದು ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿಂಗ್ ಅವರು ಸೋಮವಾರ(ಅಕ್ಟೋಬರ್​ 14) ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರನ್ನು ಅಕ್ಟೋಬರ್ 16 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಅವರು ಕಳುಹಿಸಿರುವ ಪತ್ರವನ್ನು ಒಮರ್​ ಅಬ್ದುಲ್ಲಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಒಮರ್ ಅಬ್ದುಲ್ಲಾ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸುವ ಪತ್ರವನ್ನು ಅಕ್ಟೋಬರ್ 11ರಂದು ಜೆಕೆಎನ್‌ಸಿ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಅವರಿಂದ ಸ್ವೀಕರಿಸಿರುವುದಾಗಿ ಲೆಫ್ಟಿನೆಂಟ್ ಗವರ್ನರ್​​ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಸರ್ಕಾರವನ್ನು ರಚಿಸಲು ಮತ್ತು ಮುನ್ನಡೆಸಲು ನಿಮ್ಮನ್ನು ಆಹ್ವಾನಿಸಲು ನನಗೆ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿನ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂತೆಗೆದುಕೊಳ್ಳಲಾಗಿದ್ದು ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಡಲಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ರಾಜ್ಯದಿಂದ ರಾಷ್ಟ್ರಪತಿ ಆಳ್ವಿಕೆಯನ್ನು ತೆಗೆದುಹಾಕಿರುವುದನ್ನು ವಿವಿಧ ಪಕ್ಷಗಳು ಸ್ವಾಗತಿಸಿವೆ.

ಇತ್ತೀಚೆಗೆ ಮುಕ್ತಾಯಗೊಂಡ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್​​ ಕಾಂಗ್ರೆಸ್ ಮೈತ್ರಿಕೂಟ ಜಯಗಳಿಸಿದೆ. ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಅವರು ಮೈತ್ರಿಕೂಟದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ನಂತರ 31 ಅಕ್ಟೋಬರ್ 2019ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಯಿತು.(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net