ಬೆಳಗಾವಿಯತ್ತ ನಾಳೆಯಿಂದ ಸ್ಟಾರ್ ನಾಯಕರ ದಂಡು !

ಬೆಳಗಾವಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ,ಚಿಕ್ಕೋಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಏ.12 ರಿಂದ 18 ರವರೆಗೆ ಪ್ರಧಾನಿ ನರೇಂದ್ರ ಮೋದಿ,ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತಿತರ ರಾಜ್ಯ ಮತ್ತು ರಾಷ್ಟ್ರ ನಾಯಕರು ಆಗಮಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ಮುಖಂಡ ಈರಣ್ಣ ಕಡಾಡಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬೆಳಗಾವಿ,ಚಿಕ್ಕೋಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಏ.18ರಂದು ಚಿಕ್ಕೋಡಿ ಪಟ್ಟಣದಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಬೆಳಗಾವಿಯ ಶಹಾಪುರ ಮಾಲಿನಿ ಮೈದಾನದಲ್ಲಿ ಏ.17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುರೇಶ ಅಂಗಡಿ ಪರ ಪ್ರಚಾರ ಸಭೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭಾಗವಹಿಸಲಿದ್ದಾರೆ. ಅಷ್ಟೇ ಅಲ್ಲದೆ ಕೇಂದ್ರ ಸಚಿವರು, ರಾಷ್ಟ್ರೀಯ ನಾಯಕರು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದರು.

ಏ.12 ರಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಗೇವಾಡಿ ಹಾಗೂ ಸವದತ್ತಿ ಪಟ್ಟಣದಲ್ಲಿ ವಿಧಾನಪರಿಷತ್‌ನ ಮಾಜಿ ಸದಸ್ಯೆ ಹಾಗೂ ನಟಿ ತಾರಾ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಏ.13 ರಂದು ಬೆಳಗ್ಗೆ 10 ಗಂಟೆಗೆ ಗೋಕಾಕದ ವಾಲ್ಮೀಕಿ ಮೈದಾನದಲ್ಲಿ ಬಹಿರಂಗ ಸಭೆ ಹಾಗೂ ಮಧ್ಯಾಹ್ನ 12 ಬೈಲಹೊಂಗಲದಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಏ.14 ರಂದು ಸಂಜೆ 4ಗಂಟೆಗೆ ಬಿಜೆಪಿ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರು ಬೆಳಗಾವಿಯ ಅಂಗಡಿ ಕಾಲೇಜಿನಲ್ಲಿ ನಡೆಯುವ ಸ್ಥಳೀಯ ಸಂಸ್ಥೆಗಳ ಸದಸ್ಯರ ಸಭೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಶಾಸಕ ಅನಿಲ ಬೆನಕೆ, ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜೇಂದ್ರ ಹರಕುಣಿ, ಎಂ.ಬಿ.ಝಿರಲಿ, ಬಸವರಾಜ ರೊಟ್ಟಿ ಇನ್ನಿತರರು ಇದ್ದರು.

ಕಾಂಗ್ರೆಸ್ ವಿರುದ್ಧ ದೂರು

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ ಎಂದು ನಕಲಿ ಪೋಟೋಗಳನ್ನು ಹಾಕುತ್ತಿದ್ದಾರೆ. ಇವರ ವಿರುದ್ದ ಕಾಂಗ್ರೆಸ್ ನಾಯಕರು ಕ್ರಮ ಕೈಗೊಳ್ಳಬೇಕು. ಈ ಕುರಿತು ದೂರು ಸಲ್ಲಿಸಲಾಗುವುದು ಎಂದು ಬಿಜೆಪಿ ಮುಖಂಡ ಈರಣ್ಣ ಕಡಾಡಿ ತಿಳಿಸಿದರು.

ಕಳೆದ ಲೋಕಭೆ ಚುನಾವಣೆಯಲ್ಲಿ ಮುಂಬೈ ಕರ್ನಾಟಕ 7 ಲೋಕಸಭಾ ಕ್ಷೇತ್ರಗಳ ಪೈಕಿ ಆರು ಸ್ಥಾನಗಳಲ್ಲಿ ಬಿಜೆಪಿ ಗೆದ್ದಿತ್ತು. ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಕೇವಲ 3,000 ಮತಗಳ ಕಡಿಮೆ ಅಂತರದಲ್ಲಿ ಬಿಜೆಪಿ ಸೋಲು ಕಂಡಿತ್ತು. ಆದರೆ, ಈ ಬಾರಿ ಮುಂಬೈ ಕರ್ನಾಟಕದ ಏಳು ಕ್ಷೇತ್ರವನ್ನು ಬಿಜೆಪಿ ಗೆಲ್ಲಲಿದೆ.
| ಮಹಾಂತೇಶ ಕವಟಗಿಮಠ, ವಿಧಾನ ಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕ