ಕರ್ತವ್ಯನಿರತ ಪೊಲೀಸ್ ನಿಧನ; ಡ್ಯೂಟಿಯಲ್ಲಿದ್ದಾಗಲೇ ತಲೆಸುತ್ತು ಬಂದು ಬಿದ್ದ ಹೆಡ್​ ಕಾನ್ಸ್​ಟೆಬಲ್​

Police
Published on

ಹಾವೇರಿ: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯೊಬ್ಬರು ಅನಾರೋಗ್ಯಕ್ಕೀಡಾಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯಲ್ಲಿ ವರದಿಯಾಗಿದೆ. ಸವಣೂರ ಪಟ್ಟಣದಲ್ಲಿ ಕರ್ತವ್ಯದ ಮೇಲಿದ್ದ ಪೊಲೀಸ್ ಹೆಡ್​ ಕಾನ್ಸ್​ಟೆಬಲ್ ಗುಡ್ಡಪ್ಪ ನೀಲಪ್ಪ ಬಜ್ಜಳ್ಳಿ (45) ಇಂದು ಮೃತಪಟ್ಟಿದ್ದಾರೆ. ಶನಿವಾರ ಬೆಳಗ್ಗೆ ಎಂದಿನ ಕಾರ್ಯನಿರ್ವಹಣೆಯಲ್ಲಿ ಇದ್ದ ಇವರು ತಲೆಸುತ್ತು ಬಂದು ಕುಸಿದು ಬಿದ್ದಿದ್ದಾರೆ. ತಕ್ಷಣ ಸಾರ್ವಜನಿಕರು ಅವರನ್ನು ಸವಣೂರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.

ನಂತರ ಪೋಲಿಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಆಸ್ಪತ್ರೆಗೆ ತೆರಳಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಅವರು ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ನಂತರ ಅವರ ಪಾರ್ಥಿವ ಶರೀರವನ್ನು ಅವರ ಸ್ವಂತ ಗ್ರಾಮವಾದ ಹಾವೇರಿ ತಾಲೂಕು ಕಳ್ಳಿಹಾಳ ಗ್ರಾಮಕ್ಕೆ ಕೊಂಡೊಯ್ದು ಅಂತಿಮದರ್ಶನಕ್ಕೆ ಇರಿಸಿ ಸಕಲ ಪೋಲಿಸ್ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಒಬ್ಬಳು ಪುತ್ರಿ ಹಾಗೂ ಅಪಾರ ಬಂಧುಗಳು ಇದ್ದಾರೆ.

ಮೃತರ ಆತ್ಮಕ್ಕೆ ಶಾಂತಿಕೋರಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಎಸ್​ಪಿ ಕೆ.ಜಿ. ದೇವರಾಜ್, ಸವಣೂರ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ತಹಸೀಲ್ದಾರ್ ಸಿ.ಎಸ್.ಭಂಗಿ, ಪಿಎಸ್ಐ ಶಶಿಧರ ಜಿ.ಎಂ. ಹಾಗೂ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net