More

    ಜೂ.4ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ

    ಮೈಸೂರು ನಿರ್ಮಾಣಕ್ಕೆ ವಿಶೇಷ ಕೊಡುಗೆ ನೀಡಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ಎಲ್ಲರೂ ಸೇರಿ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದರು.


    ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


    ಜೂನ್ 4 ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ ಮಾಡಲಾಗುತ್ತದೆ. ಈ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಮೈಸೂರು ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮವಾಗಿ ಆಚರಣೆ ಮಾಡಲಾಗುತ್ತಿತ್ತು. ಆದರೆ, ಈ ವರ್ಷ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಮಂಡ್ಯ ಜಿಲ್ಲೆಯಲ್ಲಿ ಆಚರಣೆ ಮಾಡಲಾಗುತ್ತಿದೆ. ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದೆ. ಅರಮನೆಯಿಂದ ಮೆರವಣಿಗೆ ಬಂದು ಕಲಾಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು. ನಾಲ್ವಡಿ ಕೃಷ್ಣರಾಜ ಒಡೆಯರ್ ಬಗ್ಗೆ ವಿಶೇಷ ಉಪನ್ಯಾಸ ನೀಡಲಾಗುವುದು ಎಂದರು.


    ಸಮುದಾಯದ ಕೆಲ ಮುಖಂಡರು ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಬಗ್ಗೆ ಹಾಗೂ ರಾಣಿ ಕೆಂಪರಾಜಮ್ಮಣ್ಣಿ ಅವರ ವಿಚಾರಧಾರೆಗಳನ್ನು ಜನರಿಗೆ ತಿಳಿಸಲು ವಿಚಾರಸಂಕಿರಣ ಏರ್ಪಡಿಸಬೇಕು. ಮೈಸೂರು ರಾಜರ ಇತಿಹಾಸ ತಿಳಿಸುವ ಡಾಕ್ಯುಮೆಂಟರಿ ಇದ್ದು ಇದನ್ನು ಶಾಲಾ, ಕಾಲೇಜು ಮಕ್ಕಳಿಗೆ ತೋರಿಸುವ ಕೆಲಸವಾಗಬೇಕು. ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಗೆ ಸರ್ಕಾರಿ ರಜೆ ಎಂದು ಘೋಷಿಸಬೇಕು, ನಾಲ್ವಡಿ ಕೃಷ್ಣರಾಜ ಒಡೆಯರ್ ಭವನ ನಿರ್ಮಿಸಬೇಕು. ನಾಲ್ವಡಿ ಕೃಷ್ಣರಾಜ ಒಡೆಯರ್ ಬಗ್ಗೆ ವಿಶೇಷ ಚಿತ್ರಕಲಾ ಸ್ಪರ್ಧೆ ಆಯೋಜಿಸಬೇಕು. ಪಠ್ಯಪುಸ್ತಕಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಇತಿಹಾಸ ಹಾಗೂ ವಿಚಾರಧಾರೆಗಳನ್ನು ಅಳವಡಿಸಬೇಕು ಎಂದು ಮನವಿ ಮಾಡಿದರು.


    ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಗಾಯತ್ರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರ ಅರಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಎಂ.ಸುದರ್ಶನ್, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts