ಶಿವಮೊಗ್ಗ: ಒಳ ಮೀಸಲಾತಿ ಜಾರಿ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಬೇಕು. ಆದೇಶ ಅನುಷ್ಠಾನದ ಮೂಲಕ ಸರ್ಕಾರ ತಳ ಸಮುದಾಯಗಳಿಗೆ ಅನುಕೂಲ ಕಲ್ಪಿಸಬೇಕೆಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎ.ಭಾನುಪ್ರಸಾದ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಆಂಧ್ರಪ್ರದೇಶ, ತೆಲಂಗಾಣ, ಪಂಜಾಬ್ ಹಾಗೂ ಹರಿಯಾಣ ರಾಜ್ಯಗಳ ತಳ ಸಮುದಾಯದ ಜನರಿಗೆ ಸಂಪೂರ್ಣ ನ್ಯಾಯ ದೊರಕಿದೆ. ಒಳ ಮೀಸಲಾತಿಗೆ ಸಂಬಂಧಿಸಿ ನಮ್ಮ ಸಂಘಟನೆ 30 ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಿದೆ ಎಂದರು.
ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಹಾಗೂ ಹಿಂದುಳಿದ ಸಮುದಾಯಗಳಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಕಾಂತರಾಜ ನೇತೃತ್ವದ ಸಮಿತಿ ವರದಿಯನ್ನು ಅನುಷ್ಠಾನಗೊಳಿಸಬೇಕು. ಈ ಮೂಲಕ ಎಲ್ಲ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಸುಪ್ರಿಂ ಕೋರ್ಟ್ ಆದೇಶದನ್ವಯ ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡಬೇಕಾಗುತ್ತದೆ. ಚುನಾವಣೆ ಪೂರ್ವದಲ್ಲಿ ಒಳ ಮೀಸಲಾತಿ ಕಲ್ಪಿಸುವ ಭರವಸೆಯನ್ನು ಕಾಂಗ್ರೆಸ್ ನೀಡಿತ್ತು. ಈಗ ನ್ಯಾಯಾಲಯದ ಬಲವೂ ಇರುವುದರಿಂದ ಭರವಸೆ ಈಡೇರಿಸಲು ಅನುಕೂಲವಾಗಿದೆ ಎಂದು ಹೇಳಿದರು.
ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲು ಸರ್ಕಾರ ಅರ್ಜಿ ಆಹ್ವಾನಿಸುವ ಸಾಧ್ಯತೆಗಳಿರುತ್ತವೆ. ಆದರೆ ಒಳ ಮೀಸಲಾತಿ ಜಾರಿಯಾಗುವವರೆಗೂ ನೇಮಕಾತಿ ಪ್ರಕ್ರಿಯೆ ನಡೆಸಬಾರದು. ಬಳಿಕವಷ್ಟೇ ನೇಮಕಾತಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಸಂಘಟನೆಯ ಪ್ರಮುಖರಾದ ಎ.ಗಂಗಾಧರ್, ಬಿ.ವೆಂಕಟೇಶ್, ಸುನೀಲ್, ಪ್ರತಾಪ್, ರಾಮು, ನರಸಿಂಹ, ಮೈಲಾರಪ್ಪ, ಜಯಂತ್, ಪ್ರತಾಪ್ ಇತರರಿದ್ದರು.