

ಹುಬ್ಬಳ್ಳಿ: ಡಿಸೆಂಬರ್ 22ರಂದು ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ (Cylinder Blast Case) ಸಂಬಂಧಿಸಿದಂತೆ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಮೃತರನ್ನು ಹುಬ್ಬಳ್ಳಿಯ ಉಣಕಲ್ ನಿವಾಸಿ ಶಂಕರ ಚವ್ಹಾಣ್ (30) ಎಂದು ಗುರುತಿಸಲಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವಾರ್ಡ್ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಶಂಕರ್ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು (ಡಿಸೆಂಬರ್ 29) ಕೊನೆಯುಸಿರು ಎಳೆದಿದ್ದಾರೆ.
ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವಳ ಕಾಲೋನಿಯ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್ 22ರಂದು ಸಂಜೆ ಸಿಲಿಂಡರ್ ಸ್ಫೋಟ (Cylinder Blast) ಸಂಭವಿಸಿತ್ತು. ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (20), ರಾಜು ಮೂಗೇರಿ (21), ಲಿಂಗಾರಾಜು ಬೀರನೂರ (24), ಶಂಕರ್ ಚವ್ಹಾಣ್ (30) ಮೃತಪಟ್ಟಿದ್ದರು.
ಘಟನಯಲ್ಲಿ ಮಂಜುನಾಥ್ ವಾಗ್ಮೋಡೆ, ಪ್ರಕಾಶ್ ಬಾರಕೇರ್, ವಿನಾಯಕ ಬಾರಕೇರ್, ತೇಜಸ್ವರ್ ಸಾತರೆಯನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.