ಜಾತ್ಯತೀತ ಶಕ್ತಿಗಳು ಒಂದಾಗಿ ಬಿಜೆಪಿಯನ್ನು ದೂರವಿಡಿ

ಚಾಮರಾಜನಗರ: ಜಾತ್ಯತೀತ ಶಕ್ತಿಗಳು ಒಂದಾಗುವ ಮೂಲಕ ಕೋಮುವಾದಿ ಬಿಜೆಪಿ ಪಕ್ಷವನ್ನು ದೂರವಿಡಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಸಂಸದ ಆರ್.ಧ್ರುವನಾರಾಯಣ ತಿಳಿಸಿದರು.
ನಗರದ ವರ್ತಕರ ಭವನದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್, ಬಿಎಸ್ಪಿ ಮೈತ್ರಿ ಸರ್ಕಾರವಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಳ್ಳಲಾಗಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳನ್ನು ಕಾಂಗ್ರೆಸ್ ಹಾಗೂ 8 ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ ಎಂದರು.

ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ನಾನು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಮೈತ್ರಿ ಪಕ್ಷಗಳ ವರಿಷ್ಠರ ಆದೇಶದಂತೆ ಎರಡು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ತಮ್ಮನ್ನು ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸಿಕೊಡಬೇಕು. ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು 9 ತಿಂಗಳ ಉತ್ತಮ ಆಡಳಿತ ನೀಡಿದ್ದು, ರೈತರ ಸಾಲಮನ್ನಾ, ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಹೆಚ್ಚಿನ ಅನುದಾನ ನೀಡಿದ್ದಾರೆ ಎಂದು ತಿಳಿಸಿದರು.
ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣೆಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಸಹಾಯ ಮಾಡಿದವರ ಋಣ ತೀರಿಸುವುದು ನನ್ನ ಕೆಲಸ. ಅಧಿಕಾರ ಶಾಶ್ವತವಲ್ಲ. ಸ್ನೇಹ ಮುಖ್ಯ, ಸ್ನೇಹಕ್ಕಾಗಿ ರಾಜಕಾರಣ ಮಾಡುತ್ತೇನೆಯೇ ಹೊರತು ಅಧಿಕಾರಕ್ಕಲ್ಲ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾದ ಸಂಸದ ಆರ್.ಧ್ರುವನಾರಾಯಣ ಅವರನ್ನು ಚುನಾವಣೆಯಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಬೆಂಬಲಿಸಬೇಕು. ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ನೀರಾವರಿಗೆ ಹೆಚ್ಚಿನ ಅನುದಾನ ನೀಡಿದ್ದು ಹಲವು ಜನಪರ ಕೆಲಸ ಮಾಡಿದ್ದಾರೆ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಕಾಮರಾಜ್ ಮಾತನಾಡಿ, ಸಂಸದ ಆರ್.ಧ್ರುವನಾರಾಯಣ್ ಅವರು ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ನಮ್ಮ ಪಕ್ಷದ ವರಿಷ್ಠರ ಆದೇಶದಂತೆ ಹೆಚ್ಚಿನ ಮತಗಳಿಂದ ಧ್ರುವನಾರಾಯಣ ಅವರನ್ನು ಮತ್ತೊಮ್ಮೆ ಸಂಸದರಾಗಿ ಆಯ್ಕೆ ಮಾಡಲು ಶ್ರಮಿಸಲಾಗುವುದು ಎಂದರು.
ಮಾಜಿ ಶಾಸಕ ಎಸ್.ಬಾಲರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಜೆಡಿಎಸ್ ತಾಲೂಕು ಅಧ್ಯಕ್ಷ ರಂಗರಾಮ್, ಮುಖಂಡರಾದ ಸಿ.ಎಂ.ಕೃಷ್ಣಮೂರ್ತಿ, ಮಹೇಶ್‌ಗೌಡ, ಸೈಯದ್‌ಪುರ್ಖಾನ್, ಎನ್.ಶಿವಮಲ್ಲು, ಸೈಯದ್ ನಜೀಬುಲ್ಲಾ, ಇಮ್ತಿಯಾಜ್ ಇತರರಿದ್ದರು.