

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್‌ಗೆ (ಬಿಟಿಸಿ) ಆನ್‌ಲೈನ್ ಬೆಟ್ಟಿಂಗ್‌ಗೆ ಅನುಮತಿ ನೀಡಿರುವ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಬೆಂಗಳೂರಿನ ಶಾಂತಿ ನಗರದ ಸಿ. ಗೋಪಾಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ನೇತೃತ್ವದ ವಿಭಾಗೀಯ ಪೀಠ, ಮಂಗಳವಾರ ವಿಚಾರಣೆ ನಡೆಸಿತು.
ವಾದ ಆಲಿಸಿದ ಪೀಠ, ಅರ್ಜಿ ಸಂಬಂಧ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ, ಇಂಥ ಅನುಮತಿ ನೀಡಲು ಸರ್ಕಾರಕ್ಕೆಅಧಿಕಾರ ಇದೆಯೇ ಎಂಬ ಬಗ್ಗೆ ನ. 20ರೊಳಗೆ ಮಾಹಿತಿ ಒದಗಿಸುವಂತೆ ಹಾಗೂ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು. ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಆನ್‌ಲೈನ್ ಮೂಲಕ ಬೆಟ್ಟಿಂಗ್ ನಡೆಸಲು ಬಿಟಿಸಿಗೆ ಅನುಮತಿ ನೀಡಿ ಕಳೆದ ಜು.2 ರಂದು ಸರ್ಕಾರ ಆದೇಶಿಸಿದೆ. ಈ ಮೂಲಕ ಸರ್ಕಾರವೇ ಸಾರ್ವಜನಿಕರನ್ನು ಬೆಟ್ಟಿಂಗ್‌ಗೆ ಪ್ರೋತ್ಸಾಹಿಸಿದಂತಾಗಿದೆ. ಇದು ಸಮಾಜಕ್ಕೆ ಮಾರಕವಾಗಿದ್ದು, ಯುವಕರು ಹಾಗೂ ಸಮಾಜದ ಹಲವು ವರ್ಗದ ಜನ ಬೀದಿಗೆ ಬೀಳಲಿದ್ದಾರೆ ಎಂದು ವಿವರಿಸಿದರು.
ಆನ್‌ಲೈನ್ ಬೆಟ್ಟಿಂಗ್‌ಗೆ ಅನುಮತಿ ನೀಡಿರುವುದರಿಂದ ಜನ ಕಷ್ಟಪಟ್ಟು ದುಡಿದ ಹಣವನ್ನು ಕಳೆದುಕೊಳ್ಳಲಿದ್ದಾರೆ. ಕಾಲೇಜು ವಿದ್ಯಾರ್ಥಿಗಳು ಬೆಟ್ಟಿಂಗ್ ಚಟಕ್ಕೆ ಬಲಿಯಾಗುವ ಸಾಧ್ಯತೆ ಇದೆ. ಸರ್ಕಾರ ಇಂಥ ಅನುಮತಿ ನೀಡಿರುವುದು ಸರಿಯಲ್ಲ. ಆದ್ದರಿಂದ ಕೂಡಲೇ ಅನುಮತಿ ಹಿಂಪಡೆಯುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.