More

    ಬಡ ವಿದ್ಯಾರ್ಥಿಗಳಿಗೆ ಆನ್‌ಲೈನ್ ಶಿಕ್ಷಣ ಸೌಕರ್ಯ ಕೋರಿ ಪಿಐಎಲ್; ಸರ್ಕಾರಕ್ಕೆ ತುರ್ತು ನೋಟಿಸ್

    ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಆನ್‌ಲೈನ್ ಶಿಕ್ಷಣಕ್ಕೆ ಅನುಕೂಲವಾಗುವಂತೆ ಲ್ಯಾಪ್‌ಟಾಪ್, ಟ್ಯಾಬ್ಲೆಟ್ ಇನ್ನಿತರ ಡಿಜಿಟಲ್ ಉಪಕರಣಗಳನ್ನು ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ.

    ಬೆಂಗಳೂರಿನ ವಕೀಲ ಎ.ಎ.ಸಂಜೀವ್ ನರೇನ್ ಸೇರಿ ಮೂವರು ಸಲ್ಲಿಸಿರುವ ಪಿಐಎಲ್ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಅರ್ಜಿ ಸಂಬಂಧ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಮುಖ್ಯ ಕಾರ್ಯದರ್ಶಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ, ಕೇಂದ್ರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿಗೊಳಿಸಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

    ಇದನ್ನೂ ಓದಿ: ಈ ಬಜಾರ್​ಗಳಲ್ಲಿ ಈರುಳ್ಳಿ ಬೆಲೆ ಕಿಲೋಗೆ 35 ರೂಪಾಯಿ!

    ಆನ್‌ಲೈನ್ ತರಗತಿ ಆಯೋಜನೆಗೆ ಸಂಬಂಧಿಸಿದಂತೆ ಈ ಹಿಂದೆ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ್ದ ಹೈಕೋರ್ಟ್, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಸೂಚಿಸಿತ್ತು. ಆದರೆ, ಸರ್ಕಾರ ಯಾವುದೇ ಸೌಲಭ್ಯ ಕಲ್ಪಿಸಿಲ್ಲ. ಕೋವಿಡ್ ಪರಿಣಾಮದಿಂದ ಉದ್ಯೋಗ ಕಳೆದುಕೊಂಡಿರುವ ಸಾಕಷ್ಟು ಜನ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ಮಕ್ಕಳ ಆನ್‌ಲೈನ್ ತರಗತಿಗೆ ಬೇಕಾದ ಸೌಲಭ್ಯ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ, ಆರ್‌ಟಿಇ ಕಾಯ್ದೆ ವ್ಯಾಪ್ತಿಗೆ ಒಳಪಡುವ ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್, ಟ್ಯಾಬ್ಲೆಟ್, ಕಂಪ್ಯೂಟರ್, ಹೈಸ್ಪೀಡ್ ಇಂಟರ್‌ನೆಟ್ ಸೇರಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

    ಇದನ್ನೂ ಓದಿ: ಶರ್ವಾನಂದ್​ ಚಿತ್ರಕ್ಕೆ ಸಾಯಿಪಲ್ಲವಿ ಬದಲು ರಶ್ಮಿಕಾ ಆಯ್ಕೆ!

    ಅರ್ಜಿದಾರರ ಆರೋಪವೇನು?: ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಶಿಕ್ಷಣ ನಡೆಸಲಾಗುತ್ತಿದೆ. ಆದರೆ, ವಿದ್ಯಾರ್ಥಿಗಳಿಗೆ ತರಗತಿಗಳನ್ನು ಕೇಳಲು ಸೂಕ್ತ ವ್ಯವಸ್ಥೆ ಮಾಡದೆ ಆನ್‌ಲೈನ್ ಕ್ಲಾಸ್‌ಗಳನ್ನು ಆರಂಭಿಸಲಾಗಿದೆ. ಇದರಿಂದ ಅನುಕೂಲಸ್ಥ ಕುಟುಂಬಗಳ ಮಕ್ಕಳಷ್ಟೇ ಪಾಠ ಕೇಳುವಂತಾಗಿದೆ. ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ಮಕ್ಕಳು ಮೊಬೈಲ್, ಲ್ಯಾಪ್‌ಟಾಪ್, ಇಂಟರ್‌ನೆಟ್ ವ್ಯವಸ್ಥೆ ಇಲ್ಲದೆ ಕಲಿಕೆಯಿಂದ ದೂರ ಉಳಿದಿದ್ದಾರೆ. ಬಡ ವಿದ್ಯಾರ್ಥಿಗಳಿಗೆ ಅಗತ್ಯ ತಾಂತ್ರಿಕ ಸೌಲಭ್ಯಗಳನ್ನು ಸರ್ಕಾರ ಒದಗಿಸಿಲ್ಲ. ಇದು ಸಂವಿಧಾನದ ವಿಧಿ 21(ಎ) ಅಡಿ ನೀಡಲಾಗಿರುವ ಶೈಕ್ಷಣಿಕ ಹಕ್ಕುಗಳ ಉಲ್ಲಂಘನೆಯಾಗಿದ್ದು, ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಮತ್ತು ನಿಯಮಗಳ ಉಲ್ಲಂಘನೆಯೂ ಆಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

    ಈ ಬಜಾರ್​ಗಳಲ್ಲಿ ಈರುಳ್ಳಿ ಬೆಲೆ ಕಿಲೋಗೆ 35 ರೂಪಾಯಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts