More

  ಪಂಪ್‌ಸೆಟ್‌ಗಳಿಗೆ ಸೌರಶಕ್ತಿ ಆದೇಶ ಅವೈಜ್ಞಾನಿಕ

  ಶಿವಮೊಗ್ಗ: ಟ್ರಾನ್ಸ್‌ಫಾರ್ಮರ್‌ನಿಂದ 500 ಮೀಟರ್‌ಗಿಂತ ಹೆಚ್ಚು ದೂರದಲ್ಲಿರುವ ಪಂಪ್‌ಸೆಟ್‌ಗಳಿಗೆ ಸೌರಶಕ್ತಿ ಬಳಸಬೇಕೆಂಬ ಆದೇಶ ಅವೈಜ್ಞಾನಿಕವಾಗಿದೆ. ಬರದ ಸಮಯದಲ್ಲಿ ರೈತರ ಮೇಲೆ ರಾಜ್ಯ ಸರ್ಕಾರ ವಿದ್ಯುತ್ ಬರೆ ಎಳೆದಿದೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

  20-30 ಸಾವಿರ ರೂ.ನಲ್ಲಿ ವಿದ್ಯುತ್ ಸಂಪರ್ಕ ಪಡೆಯುತ್ತಿದ್ದ ರೈತರು ಈಗ ಲಕ್ಷಗಟ್ಟಲೆ ಹಣ ಖರ್ಚು ಮಾಡಬೇಕಿದೆ. ರೈತರ ಅಭಿವೃದ್ಧಿಯ ಭರವಸೆ ನೀಡಿ ಅಧಿಕಾರಕ್ಕೆ ಬಂದ ಸರ್ಕಾರ ಈಗ ರೈತರಿಗೆ ನೀಡುತ್ತಿರುವ ಉಡುಗೊರೆಯಿದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
  ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಭಾಗ್ಯಗಳು ಇನ್ನೂ ಸಮರ್ಪಕವಾಗಿ ಜಾರಿಯಾಗಿಲ್ಲ. ಒಂದು ಮನೆಗೆ ಎರಡು ಸಾವಿರ ರೂ. ನೀಡುವ ಸರ್ಕಾರ, ಪರೋಕ್ಷವಾಗಿ ಅದೇ ಮನೆಗೆ ಐದಾರು ಸಾವಿರ ರೂ. ಹೊರೆ ಉಂಟುಮಾಡುತ್ತಿದೆ. ಇದು ಜನರಿಗೆ ಇನ್ನೂ ಅರಿವಾಗಿಲ್ಲ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಪೊಲೀಸ್ ಹಾಗೂ ಅಬಕಾರಿ ಇಲಾಖೆಗೆ ಹಣ ಸಂಗ್ರಹದ ಗುರಿ ನಿಗದಿಪಡಿಸಲಾಗಿದೆ. ಟ್ರಾಫಿಕ್ ಪೊಲೀಸರನ್ನು ಸಂಪೂರ್ಣವಾಗಿ ರಸ್ತೆಗಿಳಿಸಲಾಗಿದೆ. ಸಂಚಾರ ನಿಯಮ ಉಲ್ಲಂಘನೆಗೆ ದುಬಾರಿ ದಂಡ ವಿಧಿಸುತ್ತಿರುವುದು ಜನರಿಗೆ ಆರ್ಥಿಕ ಹೊರೆಯಾಗಿದೆ ಎಂದು ಹೇಳಿದರು.
  ವಸತಿ ಯೋಜನೆಗಳು ಮರೀಚಿಕೆಯಾಗಿದೆ. ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿವೆ. ಶಿವಮೊಗ್ಗ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಹಗಲು ದರೋಡೆ ಮಾಡಲಾಗುತ್ತಿದೆ. ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದು ದೂರಿದರು.
  ಜೆಡಿಎಸ್ ನಿಯೋಜಿತ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಸತೀಶ್, ನಗರಾಧ್ಯಕ್ಷ ದೀಪಕ್ ಸಿಂಗ್, ನಗರ ಪಾಲಿಕೆ ಮಾಜಿ ಸದಸ್ಯ ಮಂಜುನಾಥ್, ಪ್ರಮುಖರಾದ ರಾಮಕೃಷ್ಣ, ತ್ಯಾಗರಾಜ್, ನರಸಿಂಹ ಗಂಧದಮನೆ ಇತರರಿದ್ದರು.
  ಶಾರದಾ ಜನ್ಮದಿನ: ಜೆಡಿಎಸ್ ಜಿಲ್ಲಾ ಕಾರ್ಯಾಲಯದಲ್ಲಿ ನ.22ರ ಮಧ್ಯಾಹ್ನ 12ಕ್ಕೆ ಗ್ರಾಮಾಂತರ ಶಾಸಕಿ ಶಾರದಾ ಪೂರ‌್ಯಾನಾಯ್ಕಾ ಅವರ ಜನ್ಮದಿನ ಹಮ್ಮಿಕೊಳ್ಳಲಾಗಿದೆ. ಅದಕ್ಕೂ ಮುನ್ನ ಬೆಳಗ್ಗೆ 11ಕ್ಕೆ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿ ಖಂಡಿಸಿ ಜೆಡಿಎಸ್ ಕಚೇರಿಯಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಕೆ.ಬಿ.ಪ್ರಸನ್ನಕುಮಾರ್ ತಿಳಿಸಿದರು. ನ.27ರ ಬೆಳಗ್ಗ 11ಕ್ಕೆ ಶುಭಮಂಗಳ ಸಮುದಾಯ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕಡಿದಾಳ್ ಗೋಪಾಲ್ ಜಿಲ್ಲಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಶಾಸಕ ಜಿ.ಟಿ.ದೇವೇಗೌಡ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಮುಂತಾದವರು ಭಾಗವಹಿಸಲಿದ್ದಾರೆ ಎಂದರು.

  ರಾಜ್ಯೋತ್ಸವ ರಸಪ್ರಶ್ನೆ - 20

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts