

ಬಿಹಾರ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ತಮ್ಮ ಮೊದಲ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಇಂದು (24) ಮಾತನಾಡಿದರು. ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದ ಜೀವಗಳಿಗೆ ಪ್ರಧಾನಿ ಮೋದಿ ಅವರು ಶೋಕ ವ್ಯಕ್ತಪಡಿಸಿದರು.
ಬಿಹಾರದ ಮಧುಬನಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ಮೊದಲು ಪ್ರಧಾನಿ ಮೋದಿ ಅವರು ಮಂಗಳವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾವನ್ನಪ್ಪಿದ 26 ಜನರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸಾರ್ವಜನಿಕರೊಂದಿಗೆ ಒಂದು ನಿಮಿಷ ಮೌನ ಆಚರಿಸಿದರು.
ಇದನ್ನೂ ಓದಿ: ಭಾರತದಲ್ಲಿ ಪಾಕಿಸ್ತಾನದ ಎಕ್ಸ್ ಖಾತೆ ನಿಷೇಧ!
ವೇದಿಕೆ ಮೇಲೆ ಆಗಮಿಸಿದ ಮೋದಿ, ನನ್ನ ಭಾಷಣವನ್ನು ಪ್ರಾರಂಭಿಸುವ ಮೊದಲು, ಏಪ್ರಿಲ್ 22 ರಂದು ನಾವು ಕಳೆದುಕೊಂಡ ಕುಟುಂಬಗಳಿಗೆ ಗೌರವ ಸಲ್ಲಿಸಲು ಕೇಳುತ್ತೇನೆ. ನೀವು ಎಲ್ಲಿದ್ದರೂ ಒಂದು ಕ್ಷಣ ಮೌನ ಆಚರಿಸಬೇಕೆಂದು ನಾನು ನಿಮ್ಮೆಲ್ಲರನ್ನೂ ವಿನಂತಿಸುತ್ತೇನೆ ಎಂದು ಹೇಳಿದರು.
ಇಂದು ಬಿಹಾರದ ನೆಲದಲ್ಲಿ ನಾನು ಇಡೀ ಜಗತ್ತಿಗೆ ಹೇಳುವುದೇನೆಂದರೆ, ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ವಿಧಿಸುತ್ತದೆ ಎಂದರು. ಭಯೋತ್ಪಾದನೆಗೆ ಶಿಕ್ಷೆಯಾಗದೆ ಉಳಿಯುವುದಿಲ್ಲ. ನ್ಯಾಯ ಸಿಗುವಂತೆ ನೋಡಿಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಈ ಸಂಕಲ್ಪದಲ್ಲಿ ಇಡೀ ರಾಷ್ಟ್ರವು ಒಂದಾಗಿದೆ ಎಂದು ಅವರು ಹೇಳಿದರು.
ನಿನ್ನೆ (ಏಪ್ರಿಲ್ 22) ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ಕ್ರೂರ ದಾಳಿ ನಡೆಸಿದ್ದಾರೆ. ಕಾಶ್ಮೀರದ ಸೌಂದರ್ಯವನ್ನು ನೋಡಲು ಬಂದಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದ್ದು, ಇಸ್ರೇಲ್ ಮತ್ತು ಇಟಲಿಯ ತಲಾ ಒಬ್ಬರು, ಇಬ್ಬರು ಸ್ಥಳೀಯರು, ಕರ್ನಾಟಕದ ಇಬ್ಬರು ಸೇರಿದಂತೆ ಒಟ್ಟು 29 ಜನರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಈ ದಾಳಿಯ ಹೊಣೆಯನ್ನು ಲಷ್ಕರ್ ಎ ತೊಯ್ದಾ ಉಗ್ರ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವ 'ದಿ 'ರೆಸಿಸ್ಪನ್ಸ್ ಫ್ರಂಟ್ ವಹಿಸಿಕೊಂಡಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್ ಪಟ್ಟಣದಿಂದ 6 ಕಿ.ಮೀ ದೂರದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಬೈಸರನ್ ಕಣಿವೆಯ ಹುಲ್ಲುಗಾವಲಿನ ಪ್ರದೇಶವನ್ನು ವೀಕ್ಷಿಸುವಾಗ ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಪ್ರವಾಸಿಗರನ್ನು ಸುತ್ತುವರೆದ ಭಯೋತ್ಪಾದಕರು ಮನಬಂದಂತೆ ಗುಂಡು ಹಾರಿಸಿದರು. ಕೆಲವು ಭಯೋತ್ಪಾದಕರು, ಹೆಸರುಗಳನ್ನು ಕೇಳುತ್ತಾ ಮತ್ತು ಗುರುತಿನ ಚೀಟಿಗಳನ್ನು ನೋಡುತ್ತಾ, ಹಿಂದೂಗಳನ್ನು ಗುಂಡು ಹಾರಿಸಿ ಕೊಂದರು. ವಿಶೇಷವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡಂತೆ ತೋರುತ್ತದೆ. ಇಡೀ ಜಗತ್ತು ಈ ಘಟನೆಯನ್ನು ಖಂಡಿಸುತ್ತಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಭಯೋತ್ಪಾದಕರನ್ನು ನಿರ್ಮೂಲನೆ ಮಾಡದೇ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
2019 ರ ಪುಲ್ವಾಮಾ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ಇದಾಗಿದೆ ಎಂದು ಹೇಳಲಾಗಿದೆ. ಈ ಹತ್ಯೆಗಳು ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಮುಖ ನಗರಗಳಲ್ಲಿ ಭದ್ರತಾ ಎಚ್ಚರಿಕೆಗಳನ್ನು ಹೆಚ್ಚಿಸಲಾಗಿದೆ.
(ಏಜೆನ್ಸೀಸ್)