ನವದೆಹಲಿ: 2025ರ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಆರಂಭವಾಗುವುದಕ್ಕೆ ತಿಂಗಳುಗಳು ಬಾಕಿ ಉಳಿದಿದ್ದು, ಭಾರತ ಹಾಗೂ ಪಾಕಿಸ್ತಾನ ನಡುವಿನ ಕಿತ್ತಾಟಕ್ಕೆ ಹೆಚ್ಚು ಸದ್ದು ಮಾಡುತ್ತಿದೆ. ಏಕೆಂದರೆ ಈ ಬಾರಿಯ ಟೂರ್ನಿಯೂ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುತ್ತಿದ್ದು, ಭಾರತ ಭದ್ರತೆ ಹಾಗೂ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನ ವಿಚಾರವಾಗಿ ಪಾಕ್ಗೆ ತೆರಳುವುದಿಲ್ಲ ಎಂದು ಹೇಳಿದೆ. ಈ ವಿಚಾರ ಇದೀಗ ಐಸಿಸಿಯ ನೂತನ ಅಧ್ಯಕ್ಷ ಜಯ್ ಷಾ ಪಾಲಿಗೆ ಕಗ್ಗಂಟಾಗಿ ಪರಿಣಮಿಸಿದೆ.
ಏಕೆಂದರೆ ಚಾಂಪಿಯನ್ಸ್ ಟ್ರೋಫಿ ಜೊತೆಜೊತೆಗೆ ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜಯ್ ಷಾ ಅವರು ಕೂಡ ಸುದ್ದಿಯಲ್ಲಿದ್ದಾರೆ. ಏಕೆಂದರೆ ಜಯ್ ಷಾ ಅವರ ಆಯ್ಕೆಯನ್ನು ಪಾಕ್ ಕ್ರಿಕೆಟ್ ಮಂಡಳಿ ಕೂಡ ಬೆಂಬಲಿಸಿದ್ದು, ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ಬರಲಿದೆ ಎಂಬ ನಂಬಿಕೆ ಮೇಲೆ. ಆದರೆ, ಭಾರತ ಮಾತ್ರ ಹೈಬ್ರಿಡ್ ಮಾದರಿಯಲ್ಲಿ ನಡೆಸಿದರೆ ಮಾತ್ರ ಭಾಗಿಯಾಗುವುದಾಗಿ ಹೇಳಿದೆ. ಆದರೆ, ಪಾಕಿಸ್ತಾನವು ಭಾರತ ತಂಡಕ್ಕೆ ಸಂಪೂರ್ಣವಾಗಿ ಭದ್ರತೆ ಒದಗಿಸುವುದಾಗಿ ಹೇಳಿದ್ದು, ಲಾಹೋರ್ನಲ್ಲಿ ಕ್ರೀಡಾಂಗಣದ ಬಳಿ ಫೈವ್ ಸ್ಟಾರ್ ಹೋಟೆಲ್ ಕಟ್ಟಿಸುವುತ್ತಿರುವುದಾಗಿ ಹೇಳಿದೆ.
ಒಂದು ವೇಳೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ನಡೆಸಿದರೆ ಭಾಗಿಯಾಗುವುದಾಗಿ ಹೇಳಿರುವ ಭಾರತವು ಯಾವುದೇ ಕಾರಣಕ್ಕೂ ಪಾಕಿಸ್ತಾನಕ್ಕೆ ಕಾಲಿಡುವುದಿಲ್ಲ ಎಂದು ಹೇಳಿದೆ. ಆದರೆ, ಬಿಸಿಸಿಐ ಮನವಿಗೆ ಸೆಡ್ಡು ಹೊಡೆದಿರುವ ಪಿಸಿಬಿ ಐಸಿಸಿಗೆ ನಿರ್ಧಾರ ಪ್ರಕಟಿಸುವಂತೆ ಹೇಳಿದೆ. ಈ ವಿಚಾರ ನೂತನ ಅಧ್ಯಕ್ಷರಾದ ಜಯ್ ಷಾ ಪಾಲಿಗೆ ಕಗ್ಗಂಟಾಗಿ ಪರಿಣಮಿಸಿದ್ದು, ತೀರ್ಪು ಭಾರತದ ಪರವಾಗಿ ಬರುವ ನಿರೀಕ್ಷೆ ಇದೆ. ಆದರೆ, ಭಾರತ ತಂಡವನ್ನು ದಯವಿಟ್ಟು ಕಳಿಸಿ ಎಂದು ಜಯ್ ಷಾಗೆ ಪಾಕ್ನ ಮಾಜಿ ನಾಯಕ ಯೂನಿಸ್ ಖಾನ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ನಟ ದರ್ಶನ್ ಕೈಗೆ ಯಾಕೆ ಕೋಳ ತೊಡಿಸಿಲ್ಲ; ಎಸ್ಪಿ ಕೊಟ್ಟ ಸ್ಪಷ್ಟನೆ ಹೀಗಿದೆ
ಈ ಕುರಿತು ಮಾತನಾಡಿರುವ ಯೂನಿಸ್, ಜಯ್ ಷಾ ಅವರನ್ನು ಐಸಿಸಿ ಮುಖ್ಯಸ್ಥರನ್ನಾಗಿ ನೇಮಕ ಮಾಡುವುದರೊಂದಿಗೆ ಕ್ರಿಕೆಟ್ ಉನ್ನತಿಯಾಗಬೇಕು. ಐಸಿಸಿ ಮುಖ್ಯಸ್ಥರ ಉತ್ತಮ ಉಪಕ್ರಮಗಳೊಂದಿಗೆ ಭಾರತವು ಕ್ರಿಕೆಟ್ ಆಡಲು ಪಾಕಿಸ್ತಾನಕ್ಕೆ ಬರುವಂತೆ ಜಯ್ ಷಾ ಕ್ರೀಡಾ ಸ್ಫೂರ್ತಿಯನ್ನು ತೋರಬೇಕಿದೆ. ಭಾರತವು ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ಭೇಟಿ ನೀಡಿದರೆ ಮುಂದಿನ ದಿನಗಳಲ್ಲಿ ನಾವು ಕೂಡ ಅವರ ದೇಶಕ್ಕೆ ಭೇಟಿ ನೀಡಲಿದ್ದೇವೆ ಎಂದು ಯೂನಿಸ್ ಖಾನ್ ಹೇಳಿದ್ದಾರೆ.
ಆರ್ಥಿಕ ಸಂಕಷ್ಟದ ಭಯ
ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ತೆರಳದಿದ್ದರೆ ಆ ದೇಶದ ಕ್ರಿಕೆಟ್ ಮಂಡಳಿಗೆ ಭಾರಿ ನಷ್ಟವಾಗುವ ಸಾಧ್ಯತೆ ಇದೆ. ಈಗಾಗಲೇ ಪಾಕಿಸ್ತಾನ ನಷ್ಟದ ಹಾದಿಯಲ್ಲಿದ್ದು, ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾಗೆ ಇರುವ ಕ್ರೇಜ್ ಬೇರೆ ಯಾವ ದೇಶಕ್ಕೂ ಇಲ್ಲ. ಹೀಗಾಗಿ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಹೋದಲ್ಲಿ ಅದರಿಂದ ಆರ್ಥಿಕವಾಗಿಯೂ ಲಾಭವಾಗಲಿದೆ ಮತ್ತು ಪಾಕ್ ಮೇಲೆ ಇರುವ ಕಳಂಕವೂ ದೂರವಾಗಲಿದೆ ಎಂಬ ನಂಬಿಕೆಯಲ್ಲಿ ಅಲ್ಲಿನ ಕ್ರಿಕೆಟ್ ಮಂಡಳಿ ಕಾದು ಕುಳಿತಿದೆ. ಅಲ್ಲದೇ, ಉಭಯ ದೇಶಗಳ ನಡುವಿನ ಸಂಬಂಧವೂ ಕೂಡ ಕ್ರಿಕೆಟ್ ಮೂಲಕ ಮತ್ತೆ ಚಿಗುರಲಿದೆ ಎಂಬ ನಿರೀಕ್ಷೆಯಲ್ಲಿದೆ. ಆದರೆ, ಪಿಸಿಬಿ ನಿರೀಕ್ಷೆಗೆ ಬಿಸಿಸಿಐ ಆಘಾತ ನೀಡಿದ್ದು, ಬಹುತೇಕ ಟೀಮ್ ಇಂಡಿಯಾ ಪಾಕಿಸ್ತಾನ ತೆರಳುವುದು ಅನುಮಾನವಾಗಿದೆ.
ಇದಲ್ಲದೆ ಭದ್ರತೆಯ ಕಾರಣದಿಂದಾಗಿ ಭಾರತದ ಪಂದ್ಯಗಳನ್ನು ಲಾಹೋರ್ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಸುವುದಾಗಿ ತಿಳಿಸಿದ್ದು, ಇದಕ್ಕಾಗಿ ಕ್ರೀಡಾಂಗಣದ ಪಕ್ಕದಲ್ಲಿರುವ ಐದು ಎಕರೆ ಜಮೀನನ್ನು ಸ್ವಾದೀನಪಡಿಸಿಕೊಳ್ಳಲಾಗಿದ್ದು, ಭಾರತದ ಆಟಗಾರರು ಹಾಗೂ ಸಿಬ್ಬಂದಿ ಉಳಿದುಕೊಳ್ಳಲು 5 ಸ್ಟಾರ್ ಹೋಟೆಲ್ ನಿರ್ಮಿಸುತಿವುದಾಗಿ ಪಿಸಿಬಿ ತಿಳಿಸಿದೆ. ಇದಲ್ಲದೆ ಭಾರತ ತಂಡ ಪಾಕಿಸ್ತಾನಕ್ಕೆ ಬರುವುದರಿಂದ ಉಭಯ ದೇಶಗಳ ನಡುವಿನ ಸಂಬಂಧ ಸ್ವಲ್ಪಮಟ್ಟಿಗೆ ಸರಿಹೋಗಬಹುದು ಎಂದು ಪಿಸಿಬಿ ಆಶಿಸಿದೆ. ಆದರೆ, ಮುಂದಿನ ದಿನಗಳಲ್ಲಿ ಭಾರತ ಸರ್ಕಾರ ಇದಕ್ಕೆ ಹೇಗೆ ಪ್ರತಿಕ್ರಿಯಿಸಲಿದೆ ಎಂದು ಕಾದು ನೋಡಬೇಕಿದೆ.